Kannada NewsKarnataka NewsLatestPolitics

*ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರತಿನಿತ್ಯ 10,000 ಕ್ಯೂಸೆಕ್ಸ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, “ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಆದರೂ ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಆದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ ಉದ್ದೇಶಕ್ಕೆ ನೀರು ಇಟ್ಟುಕೊಳ್ಳುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರಕ್ಕೆ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡುತ್ತೇವೆ” ಎಂದು ತಿಳಿಸಿದರು.

ಕುಮಾರಸ್ವಾಮಿಯವರು ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರಶ್ನಿಸಿದಾಗ, “ಕುಮಾರಸ್ವಾಮಿ ಅವರು ಕೇಳಿರೋದ್ರಲ್ಲಿ ಯಾವುದೇ ತಪ್ಪಿಲ್ಲ. ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣ ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳ ಬಗ್ಗೆ ಸರ್ವಪಕ್ಷಗಳ ಜತೆ ಚರ್ಚೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ನಾವು ಕೂಡ ಸರ್ವಪಕ್ಷ ಸಭೆ ನಡೆಸುವ ಬಗ್ಗೆ ಆಲೋಚನೆ ಮಾಡಿದ್ದೇವೆ.

ಬೊಮ್ಮಾಯಿಯವರು ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಅವರ ಸರ್ಕಾರ ಇದ್ದಾಗಲೂ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ದೇವೇಗೌಡರು ಪ್ರಧಾನಿಯಾಗಿದ್ದಾಗಲೂ ನೀರು ಬಿಡಲಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ನೀರು ಬಿಡಲಾಗಿತ್ತು. ಈ ಬಗ್ಗೆ ದಾಖಲೆಗಳಿವೆ. ಈ ವಿಚಾರದಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ. ನಮ್ಮ ಪರಿಸ್ಥಿತಿ ಹದಗೆಟ್ಟಿದ್ದು ತಮಿಳುನಾಡಿನವರ ಆಗ್ರಹ ಮುಂದುವರೆದಿದೆ” ಎಂದು ಹೇಳಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button