ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೆಡೆ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ಭುಗಿಲೆದ್ದಿವೆ. ನಾಳೆ ರಾಜಧಾನಿ ಬೆಂಗಳೂರು ಬಂದ್ ಗೆ ಕರ್ನಾಟಕ ಜಲಸಂರಕ್ಷಣಾ ಸಮಿತಿ ಕರೆ ನೀಡಿದ್ದು, ಸಿಲಿಕಾನ್ ಸಿಟಿ ಸಂಪೂರ್ಣ ಸ್ತಬ್ಧಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಈ ನಡುವೆ ಬಂದ್ ಗೆ ಅವಕಾಶವಿಲ್ಲ. ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿಗೆ ಬರಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಬಲವಂತದ ಬಂದ್ ಗೆ ಅವಕಾಶವಿಲ್ಲ. ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಅವಕಾಶವಿಲ್ಲ. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದರೆ ತೊಂದರೆ ಇಲ್ಲ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗುವುದು. ಭದ್ರತೆಗಾಗಿ ನಗರದಾದ್ಯಂತ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ. 60 ಕೆ ಎಸ್ ಆರ್ ಪಿ, 40 ಸಿ ಎ ಆರ್ ತುಕಡಿ ನಿಯೋಜಿಸಲಾಗುವುದು. ಅಗತ್ಯವಿದ್ದರೆ ತಮಿಳುನಾಡು ಸಾರಿಗೆ ಬಸ್ ಗೆ ಭದ್ರತೆ ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ.
ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ