Kannada NewsKarnataka NewsLatestPolitics

*ಅಡ್ಜಸ್ಟ್ ಮೆಂಟ್ ರಾಜಕಾರಣಿ, ಛದ್ಮವೇಷಧಾರಿ, ಡೋಂಗಿ ಸಮಾಜವಾದಿ…ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ*

ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ ಎಂದು ಕಿಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ಪಕ್ಷದ ಜಾತ್ಯತೀತ ನಿಲುವಿನ ಬಗ್ಗೆ ಲಘುವಾಗಿ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಿದ್ದರಾಮಯ್ಯ ಅವರು ಜಾತ್ಯತೀತ, ಕೋಮುವಾದ ಎಂದು ಹೇಳಿಕೊಂಡೇ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ. ಅವರು ಜಾತ್ಯತೀತ ತತ್ವಗಳನ್ನು ಆಚರಣೆ ಮಾಡುವುದಿಲ್ಲ ಎಂದು ಕುಟುಕಿದ್ದಾರೆ.

ಅಲ್ಲದೆ, ಅವರನ್ನು ಛದ್ಮವೇಷಧಾರಿ, ಡೋಂಗಿ ಸಮಾಜವಾದಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ. ‘ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್’ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಎಂದು ಅವರು ಕೇಳಿದ್ದಾರೆ.

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಟಾಂಗ್ ನೀಡಿದ್ದಾರೆ.

2006ರಲ್ಲಿ ಬಿಜೆಪಿ ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ?? ಎಂದು ಖಾರವಾಗಿ ಅವರು ಪ್ರಶ್ನಿಸಿದ್ದಾರೆ.

ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು ಎಂದು ಮಾಜಿ ಸಿಎಂ ಟಾಂಗ್ ನೀದಿದ್ದಾರೆ.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button