Kannada NewsKarnataka NewsLatest

*ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಚಿರತೆ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ.

ಕಳೆದ ಮೂರು ದಿನಗಳಿಂದ ಬೆಂಗಳೂರಿನ ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಬೋನಿಗೆ ಬೀಳದೇ ಸತಾಯಿಸಿತ್ತು. ಮೂರು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿತ್ತು.

ಚಿರತೆ ಸೆರೆ ಹಿಡಿಯಲು ಮುಂದಾಗಿದ್ದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಡಾ.ಕಿರಣ್ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಮಾರಣಾಂತಿಕವಾಗಿ ಗಾಯಗೊಳಿಸಿತ್ತು. ಇದರ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿದ್ದ ಸಿಬ್ಬಂದಿ, ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದ ಪೊದೆಯಲ್ಲಿ ಅವಿತು ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿಯುವ ವೇಳೆ ಗುಂಡಿನ ದಾಳಿ ನಡೆಸಿದ್ದಾರೆ. ಅರಣ್ಯ ಇಲಾಖೆಯ ಡಬಲ್ ಬ್ಯಾರಲ್ ಗನ್ ಗುಂಡಿಗೆ ಚಿರತೆ ಬಲಿಯಾಗಿದೆ.

ಚಿರತೆಯನ್ನು ಜೀವಂತ ಸೆರೆಹಿಡಿಯಲು ಯತ್ನಿಸಲಾಗಿತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆಯೇ ಚಿರತೆ ಎರಡು ಬಾರಿ ದಾಳಿ ನಡೆಸಿತ್ತು. ಹಾಗಾಗಿ ಫೈರಿಂಗ್ ಮಾಡಲಾಗಿದೆ. ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button