*ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಷ್ಟಸೂತ್ರ ಘೋಷಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಷ್ಟಸೂತ್ರಗಳನ್ನು ವಿಧಾನಸಭೆಯಲ್ಲಿಂದು ಘೋಷಿಸಿದರು. ಈ ಮೂಲಕ ನಮ್ಮ ಸರಕಾರ ಯಾವ ಪ್ರದೇಶವನ್ನು ತಾರತಮ್ಯದಿಂದ ನೋಡುವ ಪ್ರಶ್ನೆಯೇ ಇಲ್ಲ; ಎಲ್ಲ ಪ್ರದೇಶಗಳನ್ನು ಒಂದೇ ರೀತಿಯಲ್ಲಿ ಪರಿಗಣಿಸಿ ಅಭಿವೃದ್ಧಿಪಡಿಸಲಿದೆ. ಉತ್ತರ ಕರ್ನಾಟಕದ ಜೊತೆಗೆ ಇಡೀ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಪ್ರಾದೇಶಿಕ ಅಸಮತೋಲನ ನಿವಾರಿಸುವ ಮತ್ತು ತಾರತಮ್ಯ ತಗ್ಗಿಸುವ ಉದ್ದೇಶದಿಂದ ಖ್ಯಾತ ಅರ್ಥಶಾಸ್ತ್ರಜ್ಞ ಪ್ರೊ. ಡಿ.ಎಂ.ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61,330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. ಸುಮಾರು 42,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ನಂಜುಂಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೇಷ ಅಭಿವೃದ್ಧಿ ಯೋಜನೆಯಡಿಯೇ 32433.43 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ.
ಇದರ ಜೊತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ. ಹಾಗಾಗಿ ವಿಶೇಷವಾಗಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ಖ್ಯಾತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು ಎಂದರು.
ಸದರಿ ಸಮಿತಿಗೆ 6 ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಲಾಗುವುದು. ಸದರಿ ಸಮಿತಿ ನೀಡುವ ವರದಿ ಆಧಾರದ ಮೇಲೆ ಅಗತ್ಯ ಅನುದಾನ ನೀಡುವುದರ ಮೂಲಕ ಅತ್ಯಂತ ಹಿಂದುಳಿದ, ಅತಿ ಹಿಂದುಳಿದ ಮತ್ತು ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು; ಈ ಮೂಲಕ ತಾರತಮ್ಯ ತಗ್ಗಿಸಲು ನಮ್ಮ ಸರಕಾರ ಕ್ರಮಕೈಗೊಳ್ಳಲಿದೆ ಎಂದರು. ಅಲ್ಲಿಯವರೆಗೆ ನಮ್ಮ ಸರಕಾರ ಡಿ.ಎಂ.ನಂಜುಂಡಪ್ಪ ವರದಿ ಅನುಸಾರ ಈ ವರ್ಷ 3 ಸಾವಿರ ಕೋಟಿ ರೂ.ಗಳನ್ನು ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ವಿನಿಯೋಗಿಸಲಿದೆ ಎಂದರು.
ರಾಜ್ಯದಲ್ಲಿ ಎದುರಾಗಿರುವ ಬರಗಾಲದ ಹಿನ್ನೆಲೆ ಸಹಕಾರ ಬ್ಯಾಂಕುಗಳಲ್ಲಿರುವ ರೈತರು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದರು.
ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2,000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು.
ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ.
ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು.
ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು.
ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ.
ಧಾರವಾಡದಲ್ಲಿರುವ ವಾಲ್ಮಿ [ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ] ಯನ್ನು ಉನ್ನತೀಕರಿಸಲಾಗುವುದು. ಇದನ್ನು ‘Centre of excellence for water management’ಯನ್ನಾಗಿ ಬದಲಾಯಿಸಿ ಇದರ ಮೂಲಕ ಜಲ ಶಿಕ್ಷಣ ನೀಡುವುದಷ್ಟೇ ಅಲ್ಲ, ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.
ಬಳ್ಳಾರಿ ಮತ್ತು ರಾಯಚೂರು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲು ಕ್ರಮವಹಿಸಲಾಗುವುದೆಂದು ಅವರು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳಲ್ಲಿ ಖಾಲಿಯಿರುವ ಎಲ್ಲಾ ಹುದ್ದೆಗಳನ್ನು ನಮ್ಮ ಸರ್ಕಾರ ತುಂಬಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ 371(ಜೆ) ಸೌಲಭ್ಯ ಸಿಗುವಂತೆ ಮಾಡಿದ್ದು ನಾವು;ಸದರಿ ಸೌಲಭ್ಯದಿಂದ ಉದ್ಯೋಗ,ಶಿಕ್ಷಣದಲ್ಲಿ ಅನೇಕ ಸೌಲಭ್ಯಗಳನ್ನು ಈ ಭಾಗದ ಯುವಕರು-ವಿದ್ಯಾರ್ಥಿಗಳು ಪಡೆದುಕೊಂಡು ವೈದ್ಯರು,ಎಂಜನಿಯರ್,ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆ ಗಿಟ್ಟಿಸಿರುವುದನ್ನು ಸಿಎಂ ಅವರು ಸದನದಲ್ಲಿ ಪ್ರಸ್ತಾಪಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈಗಾಗಲೇ 3 ಸಾವಿರ ಕೋಟಿ ರೂ.ಗಳನ್ನು ನಮ್ಮ ಸರಕಾರ ಒದಗಿಸಿದ್ದು,ಮುಂದಿನ ವರ್ಷದಿಂದ 5 ಸಾವಿರ ಕೋಟಿ ರೂ.ಗಳನ್ನು ಕೆಕೆಆರ್ಡಿಬಿಗೆ ಒದಗಿಸಲಾಗುವುದು ಎಂದು ಘೋಷಿಸಿದರು.
ವರ್ಷ ಪೂರ್ತಿ ಸುವರ್ಣ ಕರ್ನಾಟಕ ಸಂಭ್ರಮ ಆಚರಣೆ: ರಾಜ್ಯಕ್ಕೆ ಕರ್ನಾಟಕವೆಂದು ನಾಮಕಾರಣವಾಗಿ 50 ವರ್ಷಗಳು ಸಂದಿರುವ ಈ ಅಮೃತ ಗಳಿಗೆಯನ್ನು ಸುವರ್ಣ ಕರ್ನಾಟಕವಾಗಿ ಆಚರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದ್ದು, ಈಗಾಗಲೇ ಬೆಂಗಳೂರು,ಹಂಪಿ, ಗದಗ ಹಾಗೂ ಬೆಳಗಾವಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಸುವರ್ಣ ಕರ್ನಾಟಕ ಆಚರಣೆ ಕುರಿತು ಪ್ರಸಕ್ತ ಸಾಲಿನ ಬಜೆಟ್ದಲ್ಲಿ ಘೋಷಿಸಿರುವಂತೆ ‘ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ’ ಘೋಷವಾಕ್ಯದಡಿ ರಾಜ್ಯದಾದ್ಯಂತ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವರ್ಷಪೂರ್ತಿ ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ