*ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿ ಆಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: “ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕರ್ನಾಟಕ ಭವನದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಪ್ರಧಾನಮಂತ್ರಿಗಳು ಮುಖ್ಯಮಂತ್ರಿಗಳ ಭೇಟಿಗೆ ಸಮಯ ನೀಡಿದ್ದಾರೆ. ಮುಖ್ಯಮಂತ್ರಿಗಳು ಬರ ಪರಿಹಾರ, ನರೇಗಾ ಯೋಜನೆಯಲ್ಲಿ ಮಾನವ ಕೂಲಿ ದಿನಗಳ ಹೆಚ್ಚಳ ಸೇರಿದಂತೆ ಇತರೆ ಪ್ರಮುಖ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ. ಪ್ರಧಾನಮಂತ್ರಿಗಳ ಭೇಟಿಗೆ ನನಗೆ ಇನ್ನು ಸಮಯ ನಿಗದಿಯಾಗಿಲ್ಲ. ಹೀಗಾಗಿ ಕೆಲವು ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಿದ್ದೇನೆ ಎಂದು ತಿಳಿಸಿದರು.
ಪಕ್ಷದ ಹೈಕಮಾಂಡ್ ನಾಯಕರ ಜತೆಗೆ ಇಂದು ಸಭೆ ಬಗ್ಗೆ ಕೇಳಿದಾಗ, “ಇಂದು ಪಕ್ಷದ ನಾಯಕರ ಜತೆ ಸಭೆ ನಡೆಯಲಿದೆ. ಯಾವೆಲ್ಲಾ ವಿಷಯ ಚರ್ಚೆ ಮಾಡುತ್ತೇವೆ ಎಂಬುದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ನಿಗಮ, ಮಂಡಳಿಗಳಿಗೆ ಮೊದಲು ಶಾಸಕರ ನೇಮಕ ಆಗಲಿದೆ. ಸಾಧ್ಯವಾದರೆ ಕೆಲವು ಕಾರ್ಯಕರ್ತರ ನೇಮಕವನ್ನೂ ಮಾಡುತ್ತೇವೆ. ಒಟ್ಟು ಮೂರು ಹಂತಗಳಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು” ಎಂದು ತಿಳಿಸಿದರು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಬಗ್ಗೆ ಕೇಳಿದಾಗ, “ಇದೇ 28 ಕ್ಕೆ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ನಾಗ್ಪುರದಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಅದಕ್ಕೂ ಮುನ್ನ 21 ರಂದು ದೆಹಲಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ನಾನು ಕಾರ್ಯಕಾರಿಣಿ ಸಮಿತಿ ಸದಸ್ಯನಲ್ಲ. ನಾನು ಕೇವಲ ಆಹ್ವಾನಿತ ಮಾತ್ರ. ಸಾಮಾನ್ಯವಾಗಿ ಕಾರ್ಯಕಾರಿ ಸಮಿತಿ ಸಭೆ ನಂತರ ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಸಭೆ ಮಾಡುತ್ತಾರೆ. ಕೆಲವೊಮ್ಮೆ ಕಾರ್ಯಕಾರಿ ಸಮಿತಿ ಸಭೆ ಸಮಯದಲ್ಲೇ ಕರೆಯುತ್ತಾರೆ” ಎಂದು ತಿಳಿಸಿದರು.
ಕೋವಿಡ್ ಸೋಂಕು ಮತ್ತೆ ಹರಡುತ್ತಿರುವ ಬಗ್ಗೆ ಕೇಳಿದಾಗ, “ಅನಗತ್ಯ ಗಾಬರಿ ಬೇಡ. ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಎಲ್ಲ ಮಾಹಿತಿ ನೀಡುತ್ತೇವೆ. ಅನಗತ್ಯವಾಗಿ ಆತಂಕ ಸೃಷ್ಟಿಸುವ ಅಗತ್ಯವಿಲ್ಲ ಎಂದು ಮಾಧ್ಯಮಗಳಿಗೂ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ