ನಾಳೆ ಬೆಳಗಾವಿಗೆ ಅಮಿತ್ ಶಾ, ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-
ಕೇಂದ್ರ ಗೃಹ ಸಚಿವ ಅಮಿತ ಶಾ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಅಮಿತ ಶಾ ಆಗಮನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಆಗಮಿಸುವರು.
ಅಮಿತ ಶಾ ಅವರು 2.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹ ಪರಿಸ್ಥಿತಿಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಸಂಜೆ 4.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲೇ ಅಧಿಕಾರಿಗಳ ಸಭೆ ನಡೆಸುವರು. ನಂತರ ಅಲ್ಲಿಂದಲೇ ಅವರು ವಾಪಸ್ಸಾಗಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗ್ಗೆ 12ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲೇ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಅವರು ಮಧ್ಯಾಹ್ನ ಅಮಿತ ಶಾ ಅವರನ್ನು ಸ್ವಾಗತಿಸಿ, ಅವರೊಂದಿಗೆ ವೈಮಾನಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವರು. ಸಂಜೆ 6.25ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಬೆಳಗಾವಿ ಪ್ರವಾಹದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ 2 ದಿನಗಳ ಹಿಂದೆ ಆಗಮಿಸಿ ಸಮೀಕ್ಷೆ ನಡೆಸಿ ಹೋಗಿದ್ದಾರೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹ ಆಗಮಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ಒಟ್ಟೂ ರಾಜ್ಯದಲ್ಲಿ 6 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಕೇಂದ್ರ ಸರಕಾರ ಎಷ್ಟರಮಟ್ಟಿಗೆ ಪ್ರವಾಹದ ನೋವಿಗೆ ಸ್ಪಂದಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ