ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಕರ್ನಾಟಕದ ಕಾಂಗ್ರೆಸ್ ಸರಕಾರ ಈ ಯೋಜನೆಗಳ ಜಾರಿಗಾಗಿ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.
*ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆಗೆ ನಿರ್ಧರಿಸಿದೆ.
*KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬುಧವಾರ ಈ ಮಹತ್ವದ ಘೋಷಣೆ ಘೋಷಣೆ ಮಾಡಿದ್ದಾರೆ.
*ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆ. ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುವುದು. ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ನೀಡಲಾಗುತ್ತದೆ.
ಇದಕ್ಕಾಗಿ ವಾರ್ಷಿಕ 16 ಕೋಟಿ ರೂ. ವೆಚ್ಚವಾಗಲಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಆದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ಬುಧವಾರ ನಡೆದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು, ಶಾಸಕರು, ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ