ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಇದೀಗ ಹನುಮಧ್ವಜವನ್ನು ತೆರವುಗೊಳಿಸಿರುವ ಪೊಲೀಸರು ಹಾಗೂ ಜಿಲ್ಲಾಡಳಿತ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ.
108 ಅಡಿ ಎತ್ತರದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಇಂದು ತಾಲೂಕು ಅಧಿಕಾರಿಗಳು ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ವಿರೋಧದ ನಡುವೆಯೂ ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮಧ್ವಜವನ್ನು ತೆರವುಗೊಳಿಸಿದ್ದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ನಿಷೇಧಾಜ್ಞೆ ಜಾರಿ ಮಾಡಿದ್ದರು.
ಆದಾಗ್ಯೂ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಧ್ವಜಸ್ತಂಭದತ್ತ ಧಾವಿಸಿ ಧ್ವಜಸ್ತಂಬಕ್ಕೆ ಏಣಿ ಹಾಕಿ ಶ್ರೀರಾಮನ ಫ್ಲೆಕ್ಸ್ ಹಾಗೂ ಹನುಮ ಬಾವುಟ ಕಟ್ಟಿದ್ದರು. ಈ ವೇಳೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ವಾಗ್ವದ ನಡೆದು ಗ್ರಾಮಸ್ಥರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದರು.
ಈ ಘಟನೆಗಳ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಅಧಿಕರಿಗಳು ಧ್ವಜಸ್ತಂಭದಲ್ಲಿ ತ್ರಿವರ್ಣಧ್ವಜವನ್ನು ಹಾರಿಸಿದ್ದಾರೆ. 108 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಇದೀಗ ರಾಷ್ಟ್ರಧ್ವಜ ಹಾರಾಡುತ್ತಿದೆ.
ಸರ್ಕಾರದ ಈ ಕ್ರಮಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹನುಮಧ್ವಜ ತೆರವು ಮಾಡಲೆಂದೇ ಕಾನೂನು ಬಾಹಿರವಾಗಿ ರಾಷ್ಟ್ರಧ್ವಜ ಹಾರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ