Kannada NewsKarnataka NewsLatestPolitics

*ಆರ್.ಅಶೋಕ್, ಅಶ್ವತ್ಥನಾರಾಯಣ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಹನುಮ ಧ್ವಜ ವಿವಾದದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಜಿಲ್ಲಾಡಳಿತ ಹಾಗೂ ಪೊಲೀಸರು 108 ಅಡಿ ಎತ್ತರದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿದ್ದಾರೆ. ಹನುಮ ದ್ವಜ ತೆರವು ಮಾಡಿ ನಿಯಮಗಳನ್ನು ಗಾಳಿಗೆ ತೂರಿ ರಾಷ್ಟ್ರಧ್ವಜವನ್ನು ಹಾರಿಸಿರುವ ಕ್ರಮ ಹಾಗೂ ಇದನ್ನು ಪ್ರಶ್ನಿಸಿದ್ದಕ್ಕೆ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಖಂಡಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸ್ಥಳದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಕೆರಗೋಡು ಗ್ರಾಮಕ್ಕೆ ಭೇಟಿ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಶಾಸಕ ಅಶ್ವತ್ಥನಾರಾಯಣ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನಾಕಾರರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಧ್ವಜಸ್ತಂಭದತ್ತ ನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಬಿಜೆಪಿ ನಾಯಕರಾದ ಆರ್.ಅಶೋಕ್, ಅಶ್ವತ್ಥನಾರಾಯಣ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button