Kannada NewsKarnataka News

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ರಾಜ್ಯಮಟ್ಟದ ಸಭೆ

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ರಾಜ್ಯಮಟ್ಟದ ಸಭೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಯಾವುದೇ ಯೋಜನೆಗಳನ್ನು ರೂಪಿಸುವುದು ಹಾಗೂ ಅನುಷ್ಠಾನದ ಕುರಿತು ಜನಪ್ರತಿನಿಧಿಗಳಿಗೆ ಸಲಹೆ ನೀಡುವವರು ಅಧಿಕಾರಿಗಳು. ಆದ್ದರಿಂದ ತಮ್ಮ ಪ್ರತಿಭೆಯನ್ನು ರಾಜ್ಯದ ಅಭಿವೃದ್ಧಿಗೆ ಹಾಗೂ ಜನರ ಒಳಿತಿಗೆ ಧಾರೆ ಎರೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಕರೆ ನೀಡಿದರು.
ಸುವರ್ಣ ವಿಧಾನಸೌಧದಲ್ಲಿ ಭಾನುವಾರ (ಸೆ.8) ನಡೆದ ಎಲ್ಲಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ರಾಜ್ಯಮಟ್ಟದ ಸಭೆಯ  ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತಂದ ರೈತರ ಪ್ರತ್ಯೇಕ ಬಜೆಟ್, ಭಾಗ್ಯಲಕ್ಷ್ಮೀ ಅಂತಹ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಅಂತಹ ಹೊಸ ಯೋಜನೆಗಳನ್ನು ರೂಪಿಸುವ ಮೂಲಕ ಸರ್ವಾಂಗೀಣ ಪ್ರಗತಿಗೆ ಕೈಜೋಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಷ್ಟೆಲ್ಲಾ ಯೋಜನೆ ರೂಪಿಸಿ, ಹಣ ವೆಚ್ಚ ಮಾಡಿದಾಗ್ಯೂ ಇದುವರೆಗೆ ಎಲ್ಲ ಗ್ರಾಮಗಳಿಗೆ ನೀರು ತಲುಪಿಸುವುದು ನಮ್ಮಿಂದ ಇದುವರೆಗೆ ಸಾಧ್ಯವಾಗಿಲ್ಲ ಈ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು.
ನಮ್ಮ ಮನೆ ಹೆಣ್ಣುಮಕ್ಕಳು ಬೀದಿಬದಿ ಶೌಚಕ್ಕೆ ಹೋಗುವ ಪರಿಸ್ಥಿತಿ ಬಂದರೆ ನಮಗೆ ಹೇಗೆ ಅನಿಸುತ್ತದೆ ಎಂದು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳಬೇಕಿದೆ. ಈಗಾಗಲೇ ಸಾಕಷ್ಟು ಅಭಿವೃದ್ಧಿ ಆಗಿದೆ. ಆದರೆ ನೂರಕ್ಕೆ ನೂರರಷ್ಟು ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿರ್ಮಾಣವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಗ್ರಾಮೀಣಾಭಿವೃದ್ಧಿ ಪುಣ್ಯದ ಕೆಲಸ:

ಗ್ರಾಮೀಣಾಭಿವೃದ್ಧಿ ಪುಣ್ಯದ ಕೆಲಸವಾಗಿದೆ. ಇಂತಹ ಅವಕಾಶ ನನಗೆ ಸಿಕ್ಕಿದೆ. ಗ್ರಾಮೀಣ ಜನರ ಅಭಿವೃದ್ಧಿಗೆ ಒತ್ತು ನೀಡಬೇಕಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೇರಿದಂತೆ ಎಲ್ಲರೂ ಶ್ರಮಿಸೋಣ ಎಂದು ಸಚಿವ ಈಶ್ವರಪ್ಪ ಹೇಳಿದರು.
ರಾಜ್ಯದಲ್ಲಿ ಸಾಕಷ್ಟು ಉತ್ತಮ ಕೆಲಸವಾಗಿದೆ. ಕೇಂದ್ರ ಸರ್ಕಾರದ ಮೆಚ್ಚುಗೆಗೂ ಪಾತ್ರವಾಗಿದೆ. ಅಧಿಕಾರಿಗಳಲ್ಲಿ ಎಲ್ಲರೂ ಭ್ರಷ್ಟರು ಅಥವಾ ಸೋಮಾರಿಗಳಲ್ಲ; ಆದರೆ ಯಾರೋ ಒಬ್ಬರು ಮಾಡುವ ತಪ್ಪಿಗೆ ಇಡೀ ಸರ್ಕಾರ ಅಥವಾ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ.
ಈಗಾಗಲೇ ಸಾಕಷ್ಟು ಯೋಜನೆಗಳು ಜಾರಿಯಲ್ಲಿವೆ. ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಇನ್ನೂ ಏನಾದರೂ ಹೊಸ ಯೋಜನೆಗಳ ಕಲ್ಪನೆ ಇದ್ದರೆ ಅವುಗಳ ಬಗ್ಗೆಯೂ ಸರ್ಕಾರದ ಗಮನಕ್ಕೆ ತರಲು ಅಧಿಕಾರಿಗಳಿಗೆ ತಿಳಿಸಿದರು.
ಮುಂಬರುವ ದಿನಗಳಲ್ಲಿ ಏನು ಸುಧಾರಣೆ ಮಾಡಬಹುದು ಎಂಬುದರ ಬಗ್ಗೆ ಚಿಂತನಮಂಥನ ಸಭೆಯಲ್ಲಿ ನಡೆಯಲಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಡಾ.ಆರ್.ವಿಶಾಲ್, “ಸ್ವಚ್ಛ ಭಾರತ ಮಿಷನ್, ತೆರಿಗೆ ಸಂಗ್ರಹ ಹಾಗೂ ಇಲಾಖೆಯ ಇನ್ನಿತರ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅದೇ ರೀತಿ ಪ್ರವಾಹ ಸಂದರ್ಭದಲ್ಲಿ ಉಂಟಾದ ಹಾನಿಯ ಕುರಿತು ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್, ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button