ಬೆಳಗಾವಿಯಲ್ಲಿ ಬುಧವಾರ ಕಾಂಗ್ರೆಸ್ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬುಧವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ಧರಣಿ ಹಮ್ಮಿಕೊಂಡಿದೆ.
ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಗುರುವಾರ ಬೆಳಿಗ್ಗೆ11ಗಂಟೆಯಿಂದ ಮದ್ಯಾಹ್ನ 2 ಗಂಟೆ ಯವರೆಗೆ ಬೆಳಗಾವಿ ನಗರ ಹಾಗೂ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೆಳಗಾವಿಯ ಆರ್ ಟಿ ಓ ವೃತ್ತದ ಬಳಿಯಿರುವ ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿಯ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಮಟ್ಟದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಅಧ್ಯಕ್ಷ ರಾಜು ಸೇಠ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹಕ್ಕೆ ರಾಜ್ಯದ 22 ಜಿಲ್ಲೆಗಳ ಜನರ ಜನಜೀವನ ಅಸ್ತವ್ಯಸ್ತವಾಗಿದೆ. ಅಪಾರ ಪ್ರಮಾಣದಲ್ಲಿ ಅಸ್ತಿ, ಜನ-ಜಾನುವಾರುಗಳಿಗೆ ಹಾನಿ ಉಂಟಾಗಿದೆ.
ಆದರೂ ಕೇಂದ್ರ ಸರ್ಕಾರ ಬಿಡಿಗಾಸು ಪರಿಹಾರ ಬಿಡುಗಡೆ ಮಾಡಿಲ್ಲ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಮೂರು ಕೇಂದ್ರ ಸಚಿವರು ಮತ್ತು 25 ಲೋಕಸಭಾ ಸದಸ್ಯರು ಸೇರಿದಂತೆ
ಒಬ್ಬ ಬಿಜೆಪಿಯ ಯಾವ ಮುಖಂಡರು ಪರಿಹಾರ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಈ ನಿರ್ಲಕ್ಷ ಧೋರಣೆಯನ್ನು ಖಂಡಿಸಿ ಬೆಳಗಾವಿ ನಗರ ಹಾಗೂ ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಸಮಿತಿಗಳಿಂದ ಜಂಟಿಯಾಗಿ ಪ್ರತಿಭಟನೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.
ಆದರೆ, ಬಿಜೆಪಿ ಕಚೇರಿ ಎದುರು ಅಥವಾ ಡಿಸಿ ಕಚೇರಿ ಎದುರು ಪ್ರತಿಭಟಿಸುವ ಬದಲು ಕಾಂಗ್ರೆಸ್ ಕಚೇರಿಯಲ್ಲೇ ಪ್ರತಿಭಟನೆ ಏಕೆ ಎನ್ನುವುದಕ್ಕೆ ಅವರೇ ಉತ್ತರ ಹೇಳಬೇಕು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ