ಪ್ರಗತಿವಾಹಿನಿ ಸುದ್ದಿ : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖಾ ವರದಿ ತಮ ಕೈ ಸೇರಿಲ್ಲ ಎಂದು ಹೇಳುವ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡು ಏರಿದ ಧ್ವನಿಯಲ್ಲಿ ಮಾಧ್ಯಮದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಹಗರಣ ಕುರಿತು ತನಿಖೆಗೆ ಎಸ್ಐಟಿ ರಚಿಸಲಾಗಿದೆ. ಸರ್ಕಾರಕ್ಕೆ ಇನ್ನೂ ವರದಿ ಬಂದಿಲ್ಲ. ಪ್ರಾಥಮಿಕ ವರದಿಯೂ ಇಲ್ಲ, ಅಂತಿಮ ವರದಿಯೂ ನಮಗೆ ತಲುಪಿಲ್ಲ. ಪೂರ್ಣ ಪ್ರಮಾಣದ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೊಣೆಗಾರಿಕೆಯನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.
ಖಜಾನೆಯಿಂದ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಎದುರಾದಾಗ ಆ ರೀತಿಯಾಗಲು ಸಾಧ್ಯವಿಲ್ಲ ಎಂದು ಸಮರ್ಥನೆ ನೀಡಿದರು. ಬಿಜೆಪಿಯವರು ಹೇಳುತ್ತಾರೆ ಎಂಬ ಕಾರಣಕ್ಕೆ ಮಾಧ್ಯಮದವರು ಆ ರೀತಿಯ ಪ್ರಶ್ನೆಗಳನ್ನು ಕೇಳಬಾರದು. ಹಣ ವರ್ಗಾವಣೆಯಾಗಿರುವುದಕ್ಕೆ ದಾಖಲಾತಿ ಎಲ್ಲಿದೆ ಎಂದು ಖಾರವಾಗಿ ಪ್ರಶ್ನಿಸಿದರು.
ಇಲಾಖಾವಾರು ಮತ್ತು ನಿಗಮಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಅಧಿಕಾರಿಗಳು ಅನುದಾನ ಲಭ್ಯತೆ ಆಧಾರದ ಮೇಲೆ ಬಿಡುಗಡೆ ಮಾಡುತ್ತಾರೆ. ನನಗೆ ಅದರ ಮಾಹಿತಿ ಬರುವುದಿಲ್ಲ. ಆ ಕಡತಕ್ಕೆ ನಾನು ಸಹಿಯನ್ನೂ ಹಾಕುವುದಿಲ್ಲ. ಹಣ ವರ್ಗಾವಣೆಯಾಗಿರುವ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಇನ್ನೂ ವರದಿ ಬಂದಿಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ