Kannada NewsKarnataka News

ಅನಗತ್ಯವಾಗಿ ಸಚಿವರು ಅಥವಾ ಜನಪ್ರತಿನಿಧಿಗಳ ಭೇಟಿ ಮಾಡಬೇಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-  ಉಪ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೆ ಬಂದಿರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದರು.
ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಸೆ.22) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಯಾವುದೇ ರೀತಿಯ ಹೊಸ ಕಾಮಗಾರಿಗಳನ್ನು ಆರಂಭಿಸಬಾರದು, ಹೊಸ ಟೆಂಡರ್ ಪ್ರಕ್ರಿಯೆ ನಡೆಸಬಾರದು. ಒಂದು ವೇಳೆ ಈಗಾಗಲೇ ಕಾಮಗಾರಿ ಆರಂಭಿಸಿದ್ದರೆ ಕೆಲಸ ಮುಂದುವರಿಸಲು ಯಾವುದೇ ತೊಂದರೆಯಿಲ್ಲ.
ಇಲಾಖಾವಾರು ಆರ್ಥಿಕ ಮತ್ತು ಭೌತಿಕ ಗುರಿ ಸಾಧನೆಗೆ ಸಾಕಷ್ಟು ಸಮಯ ಇರುವುದರಿಂದ ಮಾದರಿ ನೀತಿ ಸಂಹಿತೆ ವೇಳೆ ಹೊಸದಾಗಿ ಯಾವುದೇ ಕಾಮಗಾರಿ ಆರಂಭಿಸಬಾರದು.
ಅನಗತ್ಯವಾಗಿ ಸಚಿವರು ಅಥವಾ ಜನಪ್ರತಿನಿಧಿಗಳ ಭೇಟಿ ಸೇರಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ರೀತಿಯಲ್ಲಿ ಯಾವುದೇ ರೀತಿಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಬಾರದು.

ರಜೆ ನೀಡದಂತೆ ಸೂಚನೆ:

ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಯಾವುದೇ ಅಧಿಕಾರಿಗಳು ಅಥವಾ ಕೆಳಹಂತದ ಸಿಬ್ಬಂದಿಗೆ ರಜೆ ನೀಡಬಾರದು. ಅನುಮತಿ ಪಡೆಯದೇ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಟ್ಟು ಹೊರಗಡೆ ತೆರಳಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆ-ಸಮಾರಂಭ ಅನುಮತಿ ಕಡ್ಡಾಯ:

ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಭೆ-ಸಮಾರಂಭಗಳಿಗೆ ಅನುಮತಿ ಕಡ್ಡಾಯವಾಗಿದ್ದು, ಏಕ ಗವಾಕ್ಷಿ ಪದ್ಧತಿಯಲ್ಲಿ ಸಂಘಟಕರಿಗೆ ಪರವಾನಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರ ವ್ಯಾಪ್ತಿಯಲ್ಲಿ ನಡೆಯುವ ಸಭೆ-ಸಮಾರಂಭಗಳಿಗೆ ಪಾಲಿಕೆ ಆಯುಕ್ತರು ಪರವಾನಗಿ ನೀಡುವರು.
ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು ಮತ್ತು ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಸಭೆ-ಸಮಾರಂಭ ಮತ್ತು ಮೆರವಣಿಗೆಗೆ ಪರವಾನಿಗೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪರವಾನಿಗೆ ಹೊಂದಿರುವ ಆಯುಧಗಳನ್ನು ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ನಿಯಮಾವಳಿ ಅನ್ವಯ ಜಮಾ ಮಾಡಬೇಕು ಎಂದರು.

ಚುನಾವಣಾ ಕರ್ತವ್ಯ ಕಡ್ಡಾಯ:

ಚುನಾವಣೆಗೆ ನಿಯೋಜಿಸಲಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮಗೆ ನೀಡಲಾಗುವ ಕೆಲಸವನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಜನತಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸುವುದು ಕಡ್ಡಾಯ.
ವಿಕಲಚೇತನರು, ಗರ್ಭಿಣಿಯರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರ ಮನವಿ ಪರಿಶೀಲಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲಾ ಕಟ್ಟಡಗಳ ಪರಿಶೀಲನೆಗೆ ಸೂಚನೆ:

ಕಳೆದ ಬಾರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದ ಶಾಲಾ ಕಟ್ಟಡಗಳನ್ನು ಕೂಡಲೇ ಪರಿಶೀಲಿಸಿ ವರದಿಯನ್ನು ನೀಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ವೇಳೆ ಯಾವುದಾದರೂ ಕಟ್ಟಡಗಳು ಶಿಥಿಲಗೊಂಡಿದ್ದರೆ ಕೂಡಲೇ ದುರಸ್ತಿಗೊಳಿಸಬೇಕು. ಒಂದು  ವೇಳೆ ಕಟ್ಟಡಗಳು ಸಂಪೂರ್ಣ ಕುಸಿದಿದ್ದರೆ ಪರ್ಯಾಯ ಮತಗಟ್ಟೆಗಳನ್ನು ಗುರುತಿಸಲಾಗುವುದು ಎಂದರು.
ಲೋಕೋಪಯೋಗಿ, ಅರಣ್ಯ ಸೇರಿದಂತೆ ಎಲ್ಲ ಇಲಾಖೆಯ ಪ್ರವಾಸಿಮಂದಿರ ಹಾಗೂ ನಿರೀಕ್ಷಣಾ ಮಂದಿರಗಳನ್ನು ಜಿಲ್ಲಾಡಳಿತದ ಸುಪರ್ದಿಗೆ ಪಡೆದುಕೊಳ್ಳಲಾಗುವುದು ಎಂದರು.
ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಳೆದ ಚುನಾವಣೆ ರೀತಿಯಲ್ಲಿ ದಕ್ಷತೆಯಿಂದ ಕಾರ್ಯನಿರ್ಹಿಸುವ ಮೂಲಕ ಚುನಾವಣೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸಬೇಕು ಎಂದು ಡಾ.ಬೊಮ್ಮನಹಳ್ಳಿ ಹೇಳಿದರು.
ಉಪ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ರಮೇಶ್ ಕಳಸದ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button