Latest

ಅನುದಾನ ಲಭ್ಯತೆ ಆಧರಿಸಿ ಹೊಸ ವಿದ್ಯಾರ್ಥಿನಿಲಯ: ಸಿ.ಪುಟ್ಟರಂಗಶೆಟ್ಟಿ

 

 

    ಪ್ರಗತಿವಾಹಿನಿ ಸುದ್ದಿ, ಸುವರ್ಣವಿಧಾನಸೌಧ, ಬೆಳಗಾವಿ
ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ರಾಜ್ಯದ ಒಟ್ಟಾರೆ ಬೇಡಿಕೆ ಮತ್ತು ಅನುದಾನ ಲಭ್ಯತೆ ಆಧರಿಸಿ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ವಿಧಾನ ಪರಿಷತ್‌ನಲ್ಲಿ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಅರುಣ್ ಶಹಾಪೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಒಟ್ಟು ೨೪೩೮ ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ೧೩೦೦ ಮೆಟ್ರಿಕ್ ಪೂರ್ವ ಮತ್ತು ೧೧೩೮ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿವೆ. ಅಲ್ಲದೆ, ೧೩೦೮ ವಿದ್ಯಾರ್ಥಿ ನಿಲಯಗಳು ಸ್ವಂತ ಕಟ್ಟಡಗಳಲ್ಲಿ, ೭೪ ವಿದ್ಯಾರ್ಥಿ ನಿಲಯಗಳು ಉಚಿತ ಕಟ್ಟಡಗಳಲ್ಲಿ ಹಾಗೂ ೧೦೫೬ ವಿದ್ಯಾರ್ಥಿನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ೨೪೬ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗೆ ಅರ್ಜಿಗಳು ಸ್ವೀಕೃತವಾಗಿವೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ತಿಳಗೋಳ ಗ್ರಾಮದಲ್ಲಿ ಮೆಟ್ರಿಕ್ ಪೂರ್ವ ವಸತಿನಿಲಯವನ್ನು ಪ್ರಾರಂಭಿಸಲು ಹೊಸ ಮಾರ್ಗಸೂಚಿಗಳನ್ವಯ ಪರಿಶೀಲನೆ ನಡೆಸಿ ಪ್ರಸ್ತಾವನೆ ಸಲ್ಲಿಸುವಂತೆ ಅಲ್ಲಿನ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಬಿಂಜಲಭಾವಿ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯವನ್ನು ಈ ಹಿಂದೆ ತಿಳಗೋಳ ಗ್ರಾಮಕ್ಕೆ ವರ್ಗಾವಣೆ ಮಾಡಲಾಗಿತ್ತು. ಪುನಃ ಈ ಆದೇಶ ಮಾರ್ಪಾಡಿಸಿ ಬಿಂಜಲಭಾವಿ ಗ್ರಾಮದಲ್ಲಿಯೇ ವಸತಿ ನಿಲಯವನ್ನು ಮುಂದುವರೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸರ್ಕಾರಿ ವಸತಿ ನಿಲಯಗಳ ಸ್ಥಿತಿಗತಿ ಸುಧಾರಣೆಗೆ ಒತ್ತು ನೀಡಬೇಕು ಎಂದು ಸದಸ್ಯರು ಒತ್ತಾಯಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು ನಿವೃತ್ತ ಅಪರ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿ ಈ ಕುರಿತು ಅಧ್ಯಯನ ನಡೆಸುತ್ತಿದೆ. ನಾಳೆ ಸಮಿತಿ ಸಭೆ ನಡೆಯಲಿದೆ. ಪ್ರತಿಪಕ್ಷಗಳ ಸದಸ್ಯರೂ ಕೂಡಾ ಸಭೆಗೆ ಆಗಮಿಸಿ ಸಲಹೆ ನೀಡಬಹುದು ಎಂದು ಆಹ್ವಾನವಿತ್ತರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಿದ್ಧತೆ ಪ್ರಗತಿಯಲ್ಲಿದೆ:
ಹಿಂದುಳಿದ ವರ್ಗಗಳನ್ನು ಗುರುತಿಸಿ ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ಅಂಕಿ-ಅಂಶಗಳನ್ನು ಗಣಕೀಕರಣಗೊಳಿಸಲಾಗಿದೆ. ಮಾಹಿತಿ ವಿಶ್ಲೇಷಣೆ ಮತ್ತು ವರದಿ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಮೇಲ್ಮನೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಸದಸ್ಯ ರಘುನಾಥ ರಾವ್ ಮಲ್ಕಾಪೂರೆ ಅವರ ಪ್ರಶ್ನೆಗೆ ಲಿಖಿತ ಉತ್ತರ ಒದಗಿಸಿರುವ ಸಚಿವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ೨೦೧೫ ರ ಏಪ್ರೀಲ್ ೧೧ ರಿಂದ ಪ್ರಾರಂಭಿಸಿ ೨೦೧೫ ರ ಮೇ ೩೦ ಕ್ಕೆ ಪೂರ್ಣಗೊಳಿಸಿದೆ. ಈ ಸಮೀಕ್ಷೆಗಾಗಿ ೧೫೮.೪೭ ಕೋಟಿ.ರೂ. ವೆಚ್ಚ ಮಾಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ ೧೯೯೫ ರ ಪ್ರಕರಣ ೯ (೨) ಮತ್ತು ೧೧ (೧) ಪ್ರಕಾರ ಹತ್ತು ವರ್ಷಗಳಿಗೊಮ್ಮೆ ಸಮೀಕ್ಷೆ ನಡೆಸಬೇಕಾಗಿದೆ. ದೇಶದಲ್ಲಿ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದೆ. ಹಿಂದುಳಿದ ವರ್ಗಗಳನ್ನು ಗುರುತಿಸಿ ಅವುಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಸುಧಾರಣೆಗೆ ಕಾರ್ಯಕ್ರಮಗಳನ್ನು ರೂಪಿಸಲು ಈ ಸಮೀಕ್ಷೆ ಆಧಾರವಾಗಲಿದೆ. ಆಯೋಗವು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ ಎಂದು ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button