*ಸಂಪುಟ ಸಭೆ ಬಳಿಕ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ: ನಾಳೆ ದೆಹಲಿಗೆ ಪ್ರಯಾಣ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ನಡೆ*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಆ.29ರಂದು ಅರ್ಜಿ ವಿಚಾರಣೆ ನಡೆಯಲಿದೆ.
ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಚಿವ ಸಂಪುಟ ಸಭೆ ಬಳಿಕ ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಪಾಲರ ಆದೇಶದ ವಿರುದ್ಧ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಶಾಸಕರ ಬೆಂಬಲ ಕೋರಲಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಹೆಚ್ ಎ ಎಲ್ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದು, ನಾಳೆ ರಾತ್ರಿಯೇ ಸಿಎಂ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಸಚಿವ ಸಂಪುಟ ಸಭೆ, ಶಾಸಕಾಂಗ ಪಕ್ಷದ ಸಭೆ ಬಳಿಕ ದೆಹಲಿಗೆ ಪ್ರಯಾಣ, ಹೈಕಾಂಡ್ ಭೇಟಿ ಹಾಗೂ ಚರ್ಚೆ ಸಿಎಂ ಸಿದ್ದರಾಮಯ್ಯನವರ ನಡೆ ತೀವ್ರ ಕುತೂಹಲ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ