*ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಪ್ರಾರಂಭಿಸಲಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳು ಶ್ರಮಿಸಬೇಕು ಎಂದು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ ರೇವಣ್ಣ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ (ಸೆ.18) ಜಿಲ್ಲಾ ಪಂಚಾಯತ್ ಆವರಣದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ದೇಶಗಳ ಕುರಿತು ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಸೌಲಭ್ಯಗಳನ್ನು ಸಾಕಷ್ಟು ಜನರು ಪಡೆದಿದ್ದಾರೆ. ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳ್ಳಬೇಕಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಸಮಿತಿಯ ಕಚೇರಿ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆಗಳು ಮುಟ್ಟಿಸುವುದು ಸರ್ಕಾರದ ಮೂಲ ಉದ್ದೇಶವಾಗಿದೆ. ಇದೇ ಮಾದರಿಯಲ್ಲಿ ಕಳೆದ 20 ವರ್ಷಗಳಿಂದ ಸರ್ಕಾರ ಇಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ವಸತಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಪಡಿತರ, ವಿದ್ಯಾರ್ಥಿ ವೇತನ, ನಿವೇಶನ, ಉಚಿತ ವಿದ್ಯುತ್ ಸೇರಿದಂತೆ ಈಗಾಗಲೇ ಸಾಕಷ್ಟು ಜನಪರ ಯೋಜನೆಗಳನ್ನು ರಾಜ್ಯದ ಜನತೆಗೆ ಸರ್ಕಾರ ಮೊದಲಿನಿಂದಲೂ ಕೊಡುಗೆಯಾಗಿ ನೀಡಿದೆ ಎಂದರು.
ಇದರ ಮುಂದಿನ ಆಯಾಮವಾಗಿ ರಾಜ್ಯದ ಎಲ್ಲ ಜನರಿಗೆ ಹೆಚ್ಚಿನ ಯೋಜನೆಗಳನ್ನು ತಲುಪಿಸಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು, ಸಮಿತಿ ಸದಸ್ಯರು ಶ್ರಮಿಸಬೇಕು ಎಂದು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ ರೇವಣ್ಣ ತಿಳಿಸಿದರು.
ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕೈ ಜೋಡಿಸಿ
ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನವರ ಸರಕಾರದಿಂದ ಪಂಚ ಗ್ಯಾರಂಟಿ ಗಳನ್ನು ಯೋಜನೆಗಳನ್ನು ನೀಡಲಾಗಿದ್ದು, ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಕಿತ್ತೂರು ಕರ್ನಾಟಕ ಉಸ್ತುವಾರಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್ ಪಾಟೀಲ ಅವರು ಹೇಳಿದರು.
ಇದಕ್ಕೂ ಮುಂಚೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡಿ , ಈಗಾಗಲೇ ಯೋಜನೆಗಳನ್ನು ಜಾರಿಗೊಳಿಸಿ ಒಂದು ವರ್ಷಕ್ಕೂ ಅಧಿಕ ಅವಧಿ ಕಳೆದಿದೆ. ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ದೂರು, ಸಮಸ್ಯೆಗಳಿಗೆ ತಕ್ಷಣವೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಸ್ಪಂದಿಸಬೇಕು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ, ತಾಲ್ಲೂಕು ಮಟ್ಟದ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ತಾಲ್ಲೂಕು ಮಟ್ಟದಲ್ಲಿ ಜನರೊಂದಿಗೆ ಸಂವಾದ ನಡೆಸಿ, ಯೋಜನೆಗಳ ಲಾಭ ಎಲ್ಲರಿಗೂ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.
ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪಲಿ
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.
ಚುನಾವಣೆ ಪೂರ್ವದ ಘೋಷಣೆಯಂತೆ ಸರ್ಕಾರ ರಚನೆಯ ಬಳಿಕ ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆ ನಮ್ಮದಾಗಿದೆ. ಐದು ಗ್ಯಾರಂಟಿಗಳನ್ನ ಅತ್ಯಂತ ಸಂಪೂರ್ಣವಾಗಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಎಲ್ಲಾ ಫಲಾನುಭವಿಗಳಿಗೆ ಯೋಜನಗಳನ್ನು ತಲುಪಿಸಲು ರಾಜ್ಯಮಟ್ಟದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ.
ಮುಂದಿನ ದಿನಗಳಲ್ಲಿ ಅಧಿಕಾರಿಗಳ ಸಮನ್ವಯದೊಂದಿಗೆ ಪ್ರತಿ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ನಿರಂತರ ಶ್ರಮಿಸಲಾಗುವುದು ಎಂದು ವಿನಯ ನಾವಲಗಟ್ಟಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರು ಸಭೆ ನಿರ್ವಹಿಸಿದರು. ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ಯಾರಂಟಿ ಸಮಿತಿ ಸದಸ್ಯ ತಾಲೂಕಾ ಮಟ್ಟದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ