Kannada NewsKarnataka NewsLatest

*ಮೀಸಲಾತಿ ಸಿಗುವ ಆಶಾಭಾವನೆ ಇದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

* *ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಂಬಂಧ ಸಿಎಂ ಜೊತೆ ಸಭೆ*

 ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* ಪಂಚಮಸಾಲಿ ಸಮುದಾಯಕ್ಕೆ ನಮ್ಮ ಸರ್ಕಾರದ ಅವಧಿಯಲ್ಲಿ ಮೀಸಲಾತಿ ನಿಶ್ಚಿತವಾಗಿ ಸಿಗುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. 

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರವಾಗಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವರು, ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಿಕ್ಕೇ‌ ಸಿಗಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು. 

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕೂಲಂಕಷವಾಗಿ ಚರ್ಚೆ ನಡೆಸಲಾಗಿದೆ. ನಮ್ಮ ನಾಯಕರು ನಮ್ಮ ಸಮುದಾಯದ ಬಗ್ಗೆ ಸಕಾರಾತ್ಮಕ ಭಾವನೆ ಹೊಂದಿದ್ದಾರೆ ಎಂದು ಹೇಳಿದರು. 

ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತ ಸಭೆಗೆ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಸಭೆಯಿಂದ ಯಾವುದೇ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಉಪ ಚುನಾವಣೆ ಘೋಷಣೆಗೂ ಮುನ್ನವೇ ಸಭೆಯ ದಿನಾಂಕ ನಿಗದಿಯಾಗಿತ್ತು. ಹೀಗಾಗಿ ಸಭೆಯನ್ನು ನಡೆಸಲಾಗಿದ್ದು,  ಆದರೆ, ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು. 

ನೀತಿ ಸಂಹಿತೆ ಬರುವುದಕ್ಕೂ ಮೊದಲೇ ಈ ಸಭೆ ನಿಗದಿಯಾಗಿತ್ತು. ಸ್ವಾಮೀಜಿಗಳ ಅಪ್ಪಣೆ ಮೇರೆಗೆ ಸಭೆ ನಿಗದಿಪಡಿಸಲಾಗಿತ್ತು. ಸಮಾಜದ ಬಾಂಧವರು ಹೋರಾಟಕ್ಕೆ ಸಿದ್ದರಿದ್ದಾರೆ.  ಹೀಗಾಗಿ ತಪ್ಪು ಸಂದೇಶ ಹೋಗಬಾರದು ಎನ್ನುವ ದೃಷ್ಟಿಯಿಂದ ಸಭೆ ನಡೆಸಲಾಯಿತು ಎಂದು ಸಚಿವರು ಸ್ಪಷ್ಟಪಡಿಸಿದರು. 

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವುದರಿಂದ ಬೇರೆ ಸಮುದಾಯಗಳಿಗೆ ಏನಾದರೂ ಸಮಸ್ಯೆ ಆಗಲಿದೆಯೇ ಎಂಬುದರ ಬಗ್ಗೆ ಚರ್ಚೆ ಆಗಿದ್ದು, ಮೊದಲಿನಿಂದಲೂ ಮೀಸಲಾತಿ ಹೋರಾಟದಲ್ಲಿ ನಾನು ಮುಂಚೂಣಿಯಲ್ಲಿರುವೆ ಎಂದು ಸಚಿವರು ಹೇಳಿದರು. 

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್, ವಿನಯ್ ಕುಲಕರ್ಣಿ, ಬಾಬಾ ಸಾಹೇಬ್ ಪಾಟೀಲ್, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಸೇರಿದಂತೆ ಪಂಚಮಸಾಲಿ ಮುಖಂಡರು ಭಾಗಿಯಾಗಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:

•ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು.

• ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ.

• ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು.

• ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದರು.

• ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.

• ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿತು.

• ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು.

• ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್‌ ಹೆಗಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿಯನ್ನು ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ್, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40 ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button