*ನಾಳೆಯಿಂದ ಕಿತ್ತೂರಿನಲ್ಲಿ ಜನೋತ್ಸವ: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭೇದವಿಲ್ಲದೆ ಸರಕಾರದಿಂದ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಮೊಟ್ಟಮೊದಲು ಸ್ವಾತಂತ್ರ್ಯದ ಕಹಳೆ ಮೊಳಗಿಸಿದ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ
ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎನ್ನುವ ತಾರತಮ್ಯವಿಲ್ಲದೆ ಸರಕಾರದ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಂಗಳವಾರ ಸಂಜೆ ಕಿತ್ತೂರು ಚೆನ್ನಮ್ಮ ವಿಜಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷವಾದ ಹಿನ್ನೆಲೆಯಲ್ಲಿ ಈ ಕಾರ್ಯವನ್ನು ಸರಕಾರ ಅದ್ಧೂರಿಯಾಗಿ ಆಚರಿಸುತ್ತಿದೆ. ಈ ಮೊದಲು ದಕ್ಷಿಣ ಕರ್ನಾಟಕದಲ್ಲಿ ಮಾತ್ರ ದೊಡ್ಡ ದೊಡ್ಡ ಕಾರ್ಯಕ್ರಮಗಳಾಗುತ್ತವೆ ಎನ್ನುವ ದೂರು ಇತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಆ ರೀತಿಯ ತಾರತಮ್ಯವಿಲ್ಲದೆ ಸಮಾನವಾಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆ ಸಿಕ್ಕಿದೆ. ನಾಳೆಯಿಂದ 3 ದಿನ ಕಿತ್ತೂರಿನಲ್ಲಿ ಜನೋತ್ಸವ ನಡೆಯಲಿದೆ. ಇತಿಹಾಸದ ಗತವೈಭವ ತೋರಿಸಲು ಈ ಉತ್ಸವ ಆಚರಿಸಲಾಗುತ್ತಿದೆ. ಮೊಟ್ಟಮೊದಲು ಸ್ವಾತಂತ್ರ್ಯದ ಕಹಳೆ ಮೊಳಗಿಸಿದ ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಯರಿಗೆ ಶಕ್ತಿ ತುಂಬುವ ಹೆಸರು. ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ನಮ್ಮ ಅಭಿಮಾನದ ಸಂಕೇತ ಎಂದು ಹೇಳಿದರು.
ಕಿತ್ತೂರು ಉತ್ಸವ ನಮ್ಮ ಉತ್ಸವ. ಸರಕಾರ ಮುತುವರ್ಜಿಯಿಂದ ಆಯೋಜನೆ ಮಾಡಿದೆ. ಈ ಮೂಲಕ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎರಡೂ ಸಮಾನ ಎನ್ನುವ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿದ್ದಾರೆ. ಅವರು ಅ.25ರಂದು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ರಾಜು ಸೇಠ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ಬಾಬಾ ಸಾಹೇಬ ಪಾಟೀಲ, ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಅನಂದ ಚವ್ಹಾಣ, ಜಿಲ್ಲಾಧಿಕಾರಿ ಮೊಹ್ಮದ್ ರೋಷನ್, ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ, ಎಸ್ಪಿ ಭೀಮಾ ಶಂಕರ ಗುಳೇದ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಉಪವಿಭಾಗಾಧಿಕಾರಿ ಶ್ರವಣ ನಾಯಕ ಮೊದಲಾದವರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ