Politics

*100 ಕೋಟಿ ಎಂದವರ ಮೇಲೆ ಕ್ರಮ ಕೈಗೊಳ್ಳಲಿದೆ ಕೇಂದ್ರ ಸರ್ಕಾರ: ಪ್ರಲ್ಹಾದ ಜೋಶಿ*

ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕರಿಗೆ ಯಾರು 100 ಕೋಟಿ ಆಫರ್ ಕೊಟ್ಟಿದ್ದಾರೆ? ದಾಖಲೆ ಬಿಡುಗಡೆ ಮಾಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಬರೀ ಬಾಯಿ ಮಾತಿನಲ್ಲಿ ಹೇಳಬೇಡಿ. ಯಾವ ಬಿಜೆಪಿ ನಾಯಕರು ಆಫರ್ ಕೊಟ್ಟಿದ್ದಾರೆ? ಎಂಬ ಬಗ್ಗೆ ಮೊದಲು ದಾಖಲೆ ನೀಡಿ ನೋಡೋಣ ಎಂದು ಸವಾಲೆಸೆದರು.

100 ಕೋಟಿ ಇರಲಿ, 500 ಕೋಟಿ ಆಫರ್ ಇರಲಿ ದಾಖಲೆ ಇದ್ದರೆ ಬಿಡುಗಡೆ ಮಾಡಿ. ನಿಮ್ಮನ್ನು ಯಾರೂ ತಡೆದಿಲ್ಲ. ಶಾಸಕ ರವಿ ಗಾಣಿಗ ಅವತ್ತಿನಿಂದ ಹೇಳುತ್ತಿದ್ದಾರೆ ಆದರೆ ಇನ್ನೂ ಏಕೆ ದಾಖಲೆ ಏಕೆ ಬಿಡುಗಡೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

ಕ್ರಮ ಕೈಗೊಳ್ಳಲಿದೆ ಭಾರತ ಸರ್ಕಾರ: ಕಾಂಗ್ರೆಸ್ ಶಾಸಕರಿಗೆ ಯಾರೂ 50 ಕೋಟಿ, 100 ಕೋಟಿ, 500 ಕೋಟಿ ಆಫರ್ ಎಂದೆಲ್ಲಾ ಮಾತನಾಡಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಲಿದೆ ಭಾರತ ಸರ್ಕಾರ ಎಂದು ಜೋಶಿ ಸ್ಪಷ್ಟಪಡಿಸಿದರು.

ಹಿಂದೆ ಸಿದ್ದರಾಮಯ್ಯ ಅವರೇ ಕಳಿಸಿದ್ದರು ಆಪ್ತ ಕಾಂಗ್ರೆಸ್ ಶಾಸಕರನ್ನು: ಹಿಂದೆ ಬಿಜೆಪಿ ಸರ್ಕಾರ ರಚಿಸುವಾಗ ಇದೇ ಸಿದ್ದರಾಮಯ್ಯ ಅವರೇ ತಮ್ಮ ಆಪ್ತ ಶಾಸಕರನ್ನು ಬಿಜೆಪಿಗೆ ಕಳಿಸಿದ್ದರು ಎಂದು ಜೋಶಿ ಇದೆ ವೇಳೆ ಬಹಿರಂಗಪಡಿಸಿದರು.

ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಜತೆ ಸರ್ಕಾರ ರಚನೆ ಇಷ್ಟವಿರಲಿಲ್ಲ. ಹಾಗಾಗಿ ತಾವೇ ಮುಂದೆ ನಿಂತು ಕೆಲ ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕಳಿಸಿದ್ದರು.

ಕಳೆದ ಬಾರಿ ಅಪರೇಷನ್ ಕಮಲ ನಡೆಸಲು ಕಾರಣ ರಾಜ್ಯದಲ್ಲಿ ಅತಂತ್ರ ಸ್ಥಿತಿಯತ್ತು. ಆದರೆ, ಈಗ ಪರಿಸ್ಥಿತಿ ಹಾಗಿಲ್ಲ. ಜನ ಕಾಂಗ್ರೆಸ್ ಗೆ ಬಹುಮತದ ಅಧಿಕಾರ ಕೊಟ್ಟಿದ್ದಾರೆ. ಹಾಗಿದ್ದಾಗ ನಾವೇಕೆ ಮೂಗು ತೂರಿಸೋಣ? ಎಂದು ಹೇಳಿದರು.

5 ವರ್ಷ ವಿಪಕ್ಷದಲ್ಲಿ ಇರಲು ಬಿಜೆಪಿ ಸ್ಪಷ್ಟ ನಿಲುವು: ರಾಜ್ಯದಲ್ಲಿ 5 ವರ್ಷ ವಿರೋಧ ಪಕ್ಷ ಸ್ಥಾನದಲ್ಲಿ ಇರಲು ಬಿಜೆಪಿ ಸ್ಪಷ್ಟ ನಿಲುವು ತೋರಿದೆ. ವಿಪಕ್ಷದಲ್ಲಿದ್ದು ಜನಪರವಾಗಿ ರಚನಾತ್ಮಕ ಕಾರ್ಯ ಕೈಗೊಳ್ಳುವಂತೆ ನಮ್ಮ ಹೈಕಮಾಂಡ್ ಸಹ ರಾಜ್ಯ ನಾಯಕರಿಗೆ ನಿರ್ದೇಶನ ನೀಡಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.

ಅಪರೇಷನ್ ಕಮಲ ಇಲ್ಲ; ಕಾಂಗ್ರೆಸ್ ಷಡ್ಯಂತ್ರ ಇದೆಲ್ಲ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ನಾವು ಉರುಳಿಸುವುದೂ ಇಲ್ಲ. ಮತ್ತೆ ಅಪರೇಷನ್ ಕಮಲ ನಡೆಸುವುದೂ ಇಲ್ಲ. ಕಾಂಗ್ರೆಸ್ ನವರು ತಮ್ಮ ಹುಳುಕು ಮುಚ್ಚಿಕೊಳ್ಳಲು ಮಾಡುತ್ತಿರುವ ಷಡ್ಯಂತ್ರ ಇದೆಲ್ಲ ಎಂದು ಆರೋಪಿಸಿದರು.

ಹಗರಣಗಳಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ. ಅದರಂತೆ ಲೋಹಾಯುಕ್ತ್ ವಿಚಾರಣೆ ನಡೆದಿದೆ. ಇದೆಲ್ಲಾ ಡೈವರ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಸಿಗರು ಹೀಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆ ಆದೇಶಕ್ಕೆ ಕೋರ್ಟ್ ನಿಂದ ತಡೆಯಜ್ಞೆ ಸಿಕ್ಕಿಲ್ಲ. ನಿಮ್ಮ ವಿರುದ್ಧವೇ ಕೋರ್ಟ್ ಕೇಸ್ ಇದೆ. ಅಂಥದ್ದರಲ್ಲಿ ಮತ್ತೊಬ್ಬರ ಬಗ್ಗೆ ಮಾತನಾಡುತ್ತೀರಿ. ಮೊದಲು ನೀವು ಶುದ್ಧರಾಗಿ ಎಂದು ಜೋಶಿ ಟಾಂಗ್ ಕೊಟ್ಟರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button