ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡದ ಮೇಲೆ ಅರ್ಧಕ್ಕೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಿದೆ.
ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಎಸ್.ಎಂ.ಕೃಷ್ಣ ಅಗಲಿಕೆ ಹಿನ್ನೆಲೆಯಲ್ಲಿ ಇಂದಿನಿಂದ ಡಿ.12ರವರೆಗೆ ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ ಮಾಡಲಾಗುವುದು. ಮೂರು ದಿನ ಯಾವುದೆ ಸರ್ಕಾರಿ ಕಾರ್ಯಕ್ರಮಗಳಾಗಲಿ, ಮನರಂಜನಾ ಕಾರ್ಯಕ್ರಮಗಳನ್ನಾಗಲಿ ಮಾಡುವಂತಿಲ್ಲ ಎಂದು ತಿಳಿಸಿದರು.
ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ಎಸ್.ಎಂ.ಕೃಷ್ಣ ಅವರ ಬೆಂಗಳೂರಿನ ಸದಾಶಿವ ನಗರ ನಿವಾಸದಲ್ಲಿಯೇ ಅವರ ಅಂತಿಮ ದರ್ಶನಕ್ಕೆ ಅವಕಾಶವಿದೆ. ಬೆಳಿಗ್ಗೆ 10 ಗಂಟೆ ಬಳಿಕ ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಪಾರ್ಥಿವ ಶರೀರ ಕೊಂಡೊಯ್ಯಲಾಗುವುದು. ಅಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬಳಿಕ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮನಹಳ್ಳಿ ಕಾಫಿಡೇ ಆವರಣದಲ್ಲಿ ಎಸ್.ಎಂ.ಕೃಷ್ಣ ಆಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ