Belagavi NewsBelgaum NewsPolitics

*ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ*

ವಿಧಾನ ಪರಿಷತ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಉತ್ತರ

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಶುಕ್ರವಾರದ ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.

ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.

ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾಹಿತಿ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button