*ಕನ್ನಡಿಗರ ಮೇಲೆ ಗುಂಡಿನ ದಾಳಿ: ಸಚಿವ ಸಂತೋಷ ಲಾಡ್ ನೇತೃತ್ವದ ತಂಡ ಕಾಶ್ಮೀರಕ್ಕೆ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಸೇನೆಯ ಸಮವಸ್ತ್ರದಲ್ಲಿ ಬಂದು ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಕಾಶ್ಮೀರ ಪಹಲ್ಲಾಮ್ ನ ಕಣಿವೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 30 ಜನ ಪ್ರವಾಸಿಗರು ಸಾವನ್ನಪ್ಪಿದ್ದಾರೆ.
4-5 ಉಗ್ರರ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರವಾಸಿಗರು ಹಾಗೂ ಇಬ್ಬರು ಕನ್ನಡಿಗರು ಸೇರಿದಂತೆ 30ಕ್ಕೂ ಅಧಿಕ ಪ್ರವಾಸಿಗರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.
ಹೀಗೆ ಉಗ್ರರ ದಾಳಿಗೆ ಮೃತಪಟ್ಟವರ ಪೈಕಿ ಕರ್ನಾಟಕದ ಶಿವಮೊಗ್ಗ ಮೂಲದ ಮಂಜುನಾಥ್ ಹಾಗೂ ಬೆಂಗಳೂರು ಮೂಲದ ಭರತ ಭೂಷನ್ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ಇನ್ನು ಅನೇಕರಿಗೆ ಗಾಯಗಳಾಗಿದ್ದು ಬೇರೆ ಬೇರೆ ಜಿಲ್ಲೆಗಳಿಂದ ತೆರಳಿದ್ದ ಕನ್ನಡಿಗರು ಆತಂಕದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ತೆರಳಿ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುಲು ಸೂಚನೆ ನೀಡಿದ್ದಾರೆ.

ಹೀಗಾಗಿ IPS ಅಧಿಕಾರಿ ಚೇತನ್ ಆರ್ ಮತ್ತು ಸಿಬ್ಬಂದಿ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ.
ಜೊತೆಗೆ, ಸಚಿವ ಸಂತಷ ಲಾಡ್ ಅವರನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಯ್ಯ ಟ್ವೀಟ್ ಮಾಡಿದ್ದಾರೆ.
ಅವರ ಟ್ವೀಟ್ ಹೀಗಿದೆ :
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ.
ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ.
ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ.
ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ.
ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ.