*ಮತ್ತೆ ನಾಲಿಗೆ ಹರಿಬಿಟ್ಟ ಬಿಜೆಪಿ ಎಂಎಲ್ ಸಿ: ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ.
ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಮನೋಹರ್ ನೇತೃತ್ವದ ನಿಯೋಗ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಎಂಎಲ್ ಸಿ ರವಿಕುಮಾರ್ ವಿರುದ್ಧ ದೂರು ನೀಡಿದೆ.
ಎಂ ಎಲ್ ಸಿ ರವಿಕುಮಾರ್ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದಗಳನ್ನು ಬಳಕೆ ಮಾಡಿ, ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧವೂ ಇದೇ ರೀತಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ರವಿಕುಮಾರ್ ಅವರನ್ನು ಎಂಎಲ್ ಸಿ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ದೂರು ನೀಡಿದೆ.
ಬಿಜೆಪಿ ನಡೆಸಿದ್ದ ಪ್ರತಿಭಟನೆಯ ವೇಳೆ ಜೂನ್ 30ರಂದು ಬಿಜೆಪಿ ನಿಯೋಗ ಸಿಎಸ್ ಶಾಲಿನಿ ರಜನೀಶ್ ಅವರಿಗೆ ದೂರು ನೀಡಲು ಹೋಗಿತ್ತು. ಈ ವೇಳೆ ಶಾಲಿನಿ ರಜನಿಶ್ ಅವರು ಬಿಜೆಪಿ ನಿಯೋಗಕ್ಕೆ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ರವಿಕುಮಾರ್ ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿ ವಾಗ್ದಾಳಿ ನಡೆಸಿದ್ದರು.