
ಪ್ರಗತಿವಾಹಿನಿ ಸುದ್ದಿ: ಐದು ವರ್ಷವೂ ನಾನೇ ಸಿಎಂ. ಯಾವುದೇ ಪವರ್ ಶೇರಿಂಗ್ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ.
ರಾಜ್ಯದಲ್ಲಿ ಎದ್ದಿರುವ ಸಿಎಂ ಬದಲಾವಣೆ ಚರ್ಚೆ ನಡುವೆಯೇ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿರುವ ಸಂದರ್ಶನವೊಂದರಲ್ಲಿ ಖಡಕ್ ಸಂದೇಶ ರವಾನಿಸಿದ್ದಾರೆ. ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ. ಪವರ್ ಶೇರಿಂಗ್ ಬಗ್ಗೆ ಯಾವುದೇ ಚರ್ಚೆ ನಡೆದಿಲ. ಹೈಕಮಾಂಡ್ ಭೇಟಿ ವೇಳೆಯೂ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಮುಖ್ಯಮಂತ್ರಿ ಬದಲಾಗಲಿ ಎಂದು ಹೇಳಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇದ್ದಾರೆ. ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಹೇಳುವ ಮೂಲಕ ಈಗಾಗಲೇ ಡಿ.ಕೆ.ಶಿವಕುಮಾರ್ ಕೂಡ ಸ್ಪಷ್ಟಪಡಿಸಿದ್ದಾರೆ. ಯಾವುದೇ ಪವರ್ ಶೇರಿಂಗ್ ಇಲ್ಲ ಎಂದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಅದರಲ್ಲಿ ತಪ್ಪೇನೂ ಇಲ್ಲ, ಆದರೆ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ನಿರ್ಧಾರವನ್ನು ನಾನಾಗಲಿ, ಡಿ.ಕೆ.ಶಿವಕುಮಾರ್ ಆಗಲಿ ಪಾಲಿಸಲೇಬೇಕು. ಅದಕ್ಕೆ ನಾವು ಬದ್ಧ. ಕೆಲ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸುತ್ತಾರೆ. ಹೆಚ್ಚಿನ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.
ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ.2028ರಲ್ಲಿ ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ. ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದರು.