
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ೪೦ ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದು, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಸಿಬ್ಬಂದಿಗಳು ಆತಂಕಗೊಂಡಿದ್ದಾರೆ.
ಬೆಂಗಳೂರಿನ ಆರ್.ಆರ್.ನಗರ, ಕೆಂಗೇರಿ ಸೇರಿದಂತೆ ಹಲವು ಪ್ರದೇಶದಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಶಾಲೆಯಲ್ಲಿ ಯಾರಿಗೂ ಕಾಣದ ಸ್ಥಳದಲ್ಲಿ ಚೀಲವೊಂಡನ್ನು ಇಟ್ಟಿದ್ದು, ಅದರಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಶಾಲೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ತಾನು ಸಾವನ್ನಪ್ಪುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶವನ್ನು ರವಾನಿಸಿದ್ದಾನೆ ಎಂದು ತಿಳಿದುಬಂದಿದೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಿಗೂ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.