*ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸಂತೋಷ್ ಲಾಡ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಸಂಘಟಿತ ಕಾರ್ಮಿಕ ವಲಯಗಳಲ್ಲಿ 91 ಸೆಕ್ಟರ್ ಪ್ರತ್ಯೇಕಿಸಲಾಗಿದ್ದು, ರಾಜ್ಯದಲ್ಲಿ 31 ಲಕ್ಷ ಕಾರ್ಮಿಕರ ನೋಂದಣಿಗಳಾಗಿವೆ. ಅಂತಹ ಕಾರ್ಮಿಕರಿಗೆ ವೈದ್ಯಕೀಯ, ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ 3 ವಸತಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಲಾಡ್ ಅವರು ತಿಳಿಸಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಯಮನಾಪುರ ಕೈಗಾರಿಕಾ ಪ್ರದೇಶದ ಹಿಂಡಾಲ್ಕೋ ಗೆಸ್ಟ್ ಹೌಸ್ ಹತ್ತಿರ, ಬೆಳಗಾವಿ ಇಲ್ಲಿ ಸೋಮವಾರ (ಜು.28) ನಡೆದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯ ಉದ್ಘಾಟನಾ ಹಾಗೂ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಸಂಘಟಿತ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ ನೀಡುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ.
ದೇಶದಲ್ಲಿ ಶೇಕಡ 90 ರಷ್ಟು ಮತ್ತು ರಾಜ್ಯದಲ್ಲಿ ಶೇಕಡಾ 73 ರಷ್ಟು ಅಸಂಘಟಿತ ಕಾರ್ಮಿಕರಿದ್ದಾರೆ. ಕಾರ್ಮಿಕರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ಜನರಿಗೆ ತರುವುದು ಅನಿವಾರ್ಯವಾಗಿದೆ ಎಂದರು.
ಡಿಸೆಲ್ ಮತ್ತು ಪೆಟ್ರೋಲ್ ಮೇಲೆ ಸೆಸ್ ಪಡೆದು ಕಾರ್ಮಿಕರ ಕಲ್ಯಾಣಕ್ಕೆ ಬಳಸಬೇಕು ಈ ಕುರಿತು ಸರ್ಕಾರ ಯೋಜನೆಗಳನ್ನು ರೂಪಿಸುತ್ತಿದೆ . ಡೆಲಿವರಿ ಬಾಯ್ ಗಳಿಗೆ “ಗಿಗ್ ಕಾರ್ಮಿಕ” ಯೋಜನೆಯಡಿ ವೈದ್ಯಕೀಯ ಸೌಲಭ್ಯ ಮತ್ತು ಜೀವ ವಿಮೆ ಯೋಜನೆ ಜಾರಿಗೆ ತರಲಾಗಿದೆ.
“ಸಿನಿ ಮಿಲ್ ಯೋಜನೆ”ಯಡಿ ಸಿನಿಮಾ ಟಿಕೆಟ್ ಮೇಲೆ ಸೆಸ್ ಮೊತ್ತ ಸಂಗ್ರಹಿಸಿ, ಗೊಂಬೆ ಆಟ ಆಡಿಸುವವರು, ನಾಟಕ ಕಲಾವಿದರು ಸೇರಿದಂತೆ ಸಿನಿಮಾ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಬಹುದು ಎಂದರು.
ವಾಣಿಜ್ಯ ವಾಹನಗಳನ್ನು ಓಡಿಸುವ ಕಾರ್ಮಿಕರಿಗೆ ಟ್ರಾನ್ಸ್ಪೋರ್ಟ್ ಬಿಲ್ ಮೂಲಕ ಸೆಸ್ ಸಂಗ್ರಹಿಸಿ ಅಫಘಾತ ವಿಮೆ ಯೋಜನೆ ಜಾರಿಗೆ ತರುವ ಯೋಜನೆಯ ಇದೆ. ರಾಜ್ಯದಲ್ಲಿ ವರ್ಷಕ್ಕೆ 1 ಲಕ್ಷ 60 ಸಾವಿರಕ್ಕೂ ಅಧಿಕ ಜನರು ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಇದು ಭಾರತ ಸರ್ಕಾರದ ಜಿಡಿಪಿಗೆ ಶೇಕಡಾ 3% ಕಡಿತವಾಗುತ್ತಿದೆ.
ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಹಂತದಲ್ಲಿ ಕ್ರಮ ಕೈಗೊಳ್ಳಬೇಕು ಅದೇ ರೀತಿಯಲ್ಲಿ ಜಿಲ್ಲೆಯಲ್ಲಿ ಅಫಘಾತ ವಲಯಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಕೆ.ಡಿ.ಪಿ ಸಭೆಯಲ್ಲಿ ಚರ್ಚಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿನಂತಿಸಿದರು.
ಎಸ್.ಸಿ-ಎಸ್.ಟಿ ವರ್ಗದ ಕಾರ್ಮಿಕರಿಗೆ ಕೆಲಸ ನೀಡಿದಲ್ಲಿ, ಅಂತಹ ಮಾಲೀಕರಿಗೆ 2 ವರ್ಷಗಳ ವರೆಗೆ 7 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಭಾರತ ದೇಶದಲ್ಲಿ ಪಂಚ ಗ್ಯಾರಂಟಿ ನೀಡಿದ ಮೊದಲ ಸರ್ಕಾರ ರಾಜ್ಯ ಸರ್ಕಾರವಾಗಿದೆ.
ಲೋಕೋಪಯೋಗಿ ಇಲಾಖೆಯಿಂದ ರಾಜ್ಯದಲ್ಲಿ ರಸ್ತೆ, ಸೇತುವೆ ಸೇರಿಸಂತೆ 22 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯದ ಎಲ್ಲ ಕುಟುಂಬಗಳಿಗೆ 2 ಸಾವಿರ ಹಣ ನೀಡುತ್ತಿದೆ. ಶಕ್ತಿ ಯೋಜನೆಯಡಿ 500 ಕೋಟಿ ಅಧಿಕ ಮಹಿಳೆಯರು ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು.
ಇದಕ್ಕೂ ಮುಂಚೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಕಾರ್ಮಿಕರಿಗೆ ತಲುಪಿಸಲಾಗುತ್ತಿದೆ. ಹಲವಾರು ಹೊಸ ಯೋಜನೆಗಳ, ಸಹಾಯ ಸೌಲಭ್ಯಗಳನ್ನು ಕಾರ್ಮಿಕ ಇಲಾಖೆಯಿಂದ ಜಾರಿಗೆ ತರಲಾಗಿದೆ ಎಂದರು.
ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ 3 ವಸತಿ ಶಾಲೆಗಳನ್ನು ಮಂಜೂರು ಮಾಡಲಾಗಿದ್ದು, ಜಿಲ್ಲೆಯಲ್ಲಿ ಸಹ ಕಟ್ಟಡ ಕಾರ್ಮಿಕರಿಗೆ ನಿನ್ನಷ್ಟು ಯೋಜನೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಮದುವೆ ಧನ ಸಹಾಯ, ವೈದ್ಯಕೀಯ, ಶೈಕ್ಷಣಿಕ ಸಹಾಯಧನ, ಹೆರಿಗೆ ಸಹಾಯಧನ, ತಾಯಿ ಮಗು ಸಹಾಯಹಸ್ತ, ಅಂತ್ಯಕ್ರಿಯೆ ವೆಚ್ಚ, ಅಫಘಾತ ಪರಿಹಾರ, ಪಿಂಚಣಿ ಸೌಲಭ್ಯ ಸೇರಿದಂತೆ ಇನ್ನೂ ಅನೇಕ ಯೋಜನೆಗಳನ್ನು ಕಾರ್ಮಿಕ ಇಲಾಖೆಯಿಂದ ಜಾರಿಗೆ ತರಲಾಗಿದೆ ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರು ಮಾತನಾಡಿ, ಕಟ್ಟಡ ಕಾರ್ಮಿಕರ ವಿವಿಧ ವರ್ಗಗಳನ್ನು ಗುರುತಿಸಿ, ಆ ವರ್ಗಕ್ಕೆ ಸೇರಿದ ಕಾರ್ಮಿಕರಿಗೆ ಸರ್ಕಾರದಿಂದ ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲು ಕಾರ್ಮಿಕ ಸಚಿವರು ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಮಿಕ ಶ್ರೇಯೋಭಿವೃದ್ಧಿಗೆ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಅರ್ಹ ಕಾರ್ಮಿಕರಿಗೆ ಮಾತ್ರ ಕಾರ್ಮಿಕ ಇಲಾಖೆ ಸೌಲಭ್ಯಗಳು ತಲುಪಬೇಕು. ಅನಧಿಕೃತ ಕಾರ್ಮಿಕರ ಕಾರ್ಡ್ ಗಳನ್ನ ಗುರುತಿಸಿ ರದ್ದುಪಡಿಸಬೇಕು. ಈ ನಿಟ್ಟಿನಲ್ಲಿ ಕಾರ್ಮಿಕ ಅಧಿಕಾರಿಗಳು ಸಾರ್ವಜನಿಕ ವಲಯಗಳಿಗೆ ಹೋಗಿ ಜಾಗೃತಿ ಮೂಡಿಸಬೇಕು ಎಂದರು.
ವಿವಿಧ ಕಟ್ಟಡ ಪ್ರದೇಶ ಹಾಗೂ ಕಾರ್ಮಿಕ ವಲಯಗಳಿಗೆ ಹೋಗಿ ಕಾರ್ಮಿಕರಿಗೆ ಇಲಾಖೆಯಲ್ಲಿರುವ ವಿವಿಧ ಸೌಲಭ್ಯಗಳನ್ನು ಪರಿಚಯಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಲಹೆ ನೀಡಿದರು.
ಪ್ರತಿ ಮನೆಗೆ 2 ಸಾವಿರ ರೂಪಾಯಿ, 200 ಯೂನಿಟ್ ಉಚಿತ ವಿದ್ಯುತ್ ಸೇರಿದಂತೆ ಒಟ್ಟು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನಪರ ಸರ್ಕಾರ ಅಭಿವೃದ್ಧಿ ಸರ್ಕಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೊರ ಹೊಮ್ಮಿದೆ ಎಂದು ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ತಿಳಿಸಿದರು.
ಲೋಕೋಪಯೋಗಿ ಇಲಾಖೆಯಿಂದ ನಗರ ರಸ್ತೆ, ಜಿಲ್ಲೆಯ ವಿವಿಧ ರಸ್ತೆಗಳ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯಿಂದ ರಾಜ್ಯದಲ್ಲಿ ಅತಿ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸೇಠ್ ಅವರು ಹೇಳಿದರು.
ಸ್ಮಾರ್ಟ್ ಕಾರ್ಡ್, ಚೆಕ್ ವಿತರಣೆ
ಕಾರ್ಯಕ್ರಮದ ಬಳಿಕ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದರು.
ನಂತರ ಆಶಾದೇವಿ ಯೋಜನೆಯಡಿ ಕಾರ್ಮಿಕ ಫಲಾನುಭವಿಗಳಿಗೆ ಚೆಕ್ ವಿತರಿಸಿ, ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯ ಉದ್ಘಾಟಿಸಿದರು.
ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ
ಭಾರತಿ.ಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಜಂಟಿ ಕಾರ್ಯದರ್ಶಿ ಎ. ಎಚ್ ಉಮೇಶ, ಪ್ರಾದೇಶಿಕ ಬೆಳಗಾವಿ ಉಪ ಕಾರ್ಮಿಕ ಆಯುಕ್ತ ನಾಗೇಶ್ ಡಿ.ಜಿ, ಬೆಳಗಾವಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಕೆ.ಬಿ ನಾಗರಾಜ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯ ಸದಸ್ಯರು, ಕಾರ್ಮಿಕ ಅಧಿಕಾರಿಗಳು ಕಾರ್ಮಿಕ ನಿರೀಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.