
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಮಹಾರಾಷ್ಟ್ರದಾದ್ಯಂತ ವ್ಯಾಪಕ ಮಳೆಯಿಂದಾಗಿ ಅನಾಹುತಗಳು ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ. ಮುಂಬೈ ಮಹಾನಗರಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈನಡುವೆ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅತಿ ಹೆಚ್ಚು ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಮುಂದಿನ 48 ಗಂಟೆಗಳ ಕಾಲ ಮುಂಬೈ, ಥಾಣೆ, ರಾಯಘಡ, ರತ್ನಗಿರಿ ಹಾಗೂ ಸಿಂಧುದುರ್ಗ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದ್ದು, ನಿರ್ಣಾಯಕವಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಲಾಗಿದೆ.
ಪ್ರವಾಹಪೀಡಿತ ಸ್ಥಳಗಳಲ್ಲಿನ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ನಾಂದೇಡ್ ನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 290 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.