*ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಸಂಜೆ ಪ್ರತಿಕ್ರಿಯೆ ನೀಡಿದರು.
“ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ತಿಳಿಸಿದರು.
“ಕರಾವಳಿ ಭಾಗದ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಸಚಿವರುಗಳ ಜೊತೆ ಮೊಟ್ಟ ಮೊದಲ ಸಭೆ ನಡೆಸಲಾಯಿತು. ಅಧಿಕಾರಿಗಳೂ ಸಹ ಸಭೆಯಲ್ಲಿ ಹಾಜರಿದ್ದರು. ಪರಿಹಾರೋಪಾಯಗಳ ಬಗ್ಗೆ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ” ಎಂದರು
ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಸಭೆಯಲ್ಲಿ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಡಿಸಿಎಂ ಅವರು ನಂತರ ಮಾಧ್ಯಮದವರ ಜತೆ ಮಾತನಾಡಿದರು.