
ಪ್ರಗತಿವಾಹಿನಿ ಸುದ್ದಿ: ಕೆಲ ಖಾಸಗಿ ಶಾಲೆಯಲ್ಲಿ ಕೇವಲ ಆಂಗ್ಲ ಭಾಷೆಯಲ್ಲಿ ಮಾತ್ರ ಸಂವಹನ ನಡೆಸುವಂತೆ ಒತ್ತಡ ಹೇರಲಾಗುತ್ತೆ. ಆದರೆ ಇಲ್ಲೊಂದು ಶಾಲೆ ಕನ್ನಡ ಮಾತನಾಡಿದಕ್ಕೆ ದಂಡ ವಿಧಿಸಿರುವ ಘಟನೆ ನಡೆದಿದೆ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರೊಬ್ಬರು ಅಧ್ಯಕ್ಷರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸಿಎಂ ಅಧಿಕೃತ ನಿವಾಸ ಕೃಷ್ಣಾ ಬಳಿಯ ಕುಮಾರಕೃಪಾ ರಸ್ತೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಈ ಆಘಾತಕಾರಿ ವಿಚಾರವನ್ನು ಖಚಿತಪಡಿಸಿದೆ. ಈ ಬಗ್ಗೆ ಸಿಂಧಿ ಪ್ರೌಢಶಾಲೆಯ ಆಡಳಿತ ಮಂಡಳಿಯ ಬಳಿ ಸ್ಪಷ್ಟನೆ ಕೇಳಲು ಪ್ರಯತ್ನಿಸಲಾಗಿದ್ದು, ಉತ್ತರ ನೀಡಲು ನಿರಾಕರಿಸಿದೆ.
ಸದ್ಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಪತ್ರ ಬರೆದಿದೆ. ಕೂಡಲೇ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರನ್ನು ವಿಚಾರಿಸಿ, ನೈಜತೆ ಪರಿಶೀಲಿಸಿ ಒಂದು ವಾರದೊಳಗೆ ವರದಿ ನೀಡುವಂತೆ ಹೇಳಿದೆ.
ವಿಳಂಬವಾದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ. ಇಷ್ಟಾದರೂ ಸಿಂಧಿ ಶಾಲೆಯ ಆಡಳಿತ ಮಂಡಳಿ ಘಟನೆಯ ಬಗ್ಗೆ ಉತ್ತರ ನೀಡಲು ಸಿದ್ಧರಿಲ್ಲ ಎನ್ನಲಾಗಿದೆ.