*ಗಣೇಶ ಮೆರವಣಿಗೆ ವೇಳೆ ನಡೆದ ದುರಂತಕ್ಕೆ ಸಿಎಂ ಸಂತಾಪ: 5 ಲಕ್ಷ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು 9ಜನ ಸಾವನ್ನಪ್ಪಿದ್ದು ಮೃತರ ಕುಟುಂಬಕ್ಕೆ ಸರ್ಕಾರ ದಿಂದ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಆ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಭಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ
ಇನ್ನು ಟ್ರಕ್ ಚಾಲಕ ಭುವನೇಶ್ ಸ್ಥಿತಿ ಕೂಡ ಚಿಂತಾಜನಕವಾಗಿದೆ. ಅಪಘಾತದ ನಂತರ ಸ್ಥಳೀಯರು ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದು ಭುವನೇಶ್ ಗೂ ಗಂಭೀರ ಗಾಯಗಳಾಗಿವೆ.
ರಾಷ್ಟ್ರೀಯ ಹೆದ್ದಾರಿ 373ರ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣಪತಿಮೆರವಣಿಗೆ ಸಾಗುತ್ತಿತ್ತು. ಮತ್ತೊಂದು ಕಡೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ವೇಗದಲ್ಲಿ ಸಾಗುತ್ತಿದ್ದ ಕ್ಯಾಂಟರ್ ಎದುರಿಗೆ ಬಂದ ಬೈಕ್ ಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸುವ ಭರದಲ್ಲಿ ಕ್ಯಾಂಟರ್ನ ದಿಕ್ಕನ್ನು ಬಲಕ್ಕೆ ತಿರುಗಿಸಿದ್ದಾನೆ. ವೇಗದಲ್ಲಿ ಇದ್ದ ಕಾರಣಕ್ಕೆ ಕ್ಯಾಂಟರ್ ಡಿವೈಡರ್ಗೆ ಡಿಕ್ಕಿಯಾಗಿ 9 ಜನರ ಜೀವಕ್ಕೆ ಹಾನಿ ಮಾಡಿದೆ. ಈಗಾಗಲೇ ಚಾಲಕ ಭುವನೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ನಿಗಾ ವಹಿಸಿದ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು
ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹಗಳನ್ನು ಹಸ್ತಾಂತರಿಸಿದ ವೈದ್ಯರ ತಂಡ
ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರ ತಂಡದ ರವಾನೆ
ಬೆಂಗಳೂರು : ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.
ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.
ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.