NationalPolitics

*ನಟ ವಿಜಯ್ ರ್ಯಾಲಿಯಲ್ಲಿ ಕಾಲ್ತುಳಿತ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ*

ಪ್ರಗತಿವಾಹಿನಿ ಸುದ್ದಿ: ತಮಿಳು ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ನಡೆಸುತ್ತಿದ್ದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಲ್ತಿಳಿತ ಸಂಭವಿಸಿ 33 ಜನರು ಸಾವನ್ನಪ್ಪಿದ್ದು, ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ಪಕ್ಷದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ದುರದೃಷ್ಟಕರ ಘಟನೆ. ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬದವರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರು ನಡೆಸುತ್ತಿದ್ದ ಚುನಾವಣಾ ಪ್ರಚಾರ ರ್ಯಾಅಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ರ್ಯಾಲಿಯಲ್ಲಿ ಬಸ್ ಮೇಲೆ ನಿಂತು ನಟ ವಿಜಯ್ ಭಾಷಣ ಮಾಡುತ್ತಿದ್ದರು. ಈ ವೇಳೆ ಲಕ್ಷಾಂತರ ಜನರು ನೆರೆದುದ್ದು, ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ. ನಟ ವಿಜಯ್ ಅವರತ್ತ ಧಾವಿಸಿ ಬಂದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತ ಸಂಭವಿಸಿದೆ. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಲೆಕ್ಕವಿಲ್ಲದಷ್ಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವು ಮಕ್ಕಳು ನಾಪತ್ತೆಯಾಗಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸಪಡುತ್ತಿದ್ದಾರೆ. ಮಕ್ಕಳನ್ನು ಹುಡುಕಾಡಲು ಪೋಷಕರು ಪರದಾಟ ನಡೆಸಿದ್ದಾರೆ. ಗಾಯಾಳುಗಳಲ್ಲಿ 40ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಕರೂರು ಆಸ್ಪತ್ರೆಯಲ್ಲಿ ಕುಟುಂಬದವರನ್ನು ಕಳೆದುಕೊಂಡವರ ಆಕ್ರಂದನ, ಗೋಳಾಟ ಮುಗಿಲು ಮುಟ್ಟಿದೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.

Home add -Advt

Related Articles

Back to top button