Belagavi NewsBelgaum NewsKannada NewsKarnataka NewsLatest

*ಜಿಲ್ಲೆಯಲ್ಲಿ 156 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ: ಸಂದೀಪ ಪಾಟೀಲ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು, ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ(ಎಂ.ಸಿ.ಸಿ), ಭಾರತದ ಸರ್ವೋಚ್ಚ ನ್ಯಾಯಾಲಯದೊಂದಿಗೆ, ‘ವಿಶೇಷ ಮಧ್ಯಸ್ಥಿಕೆ ಅಭಿಯಾನ ‘ರಾಷ್ಟ್ರಕ್ಕಾಗಿ’ 90 ದಿನಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ 156 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹೊಸ ನ್ಯಾಯಾಲಯಗಳ ಸಂಕೀರ್ಣದ ಅವರಣದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಅ.10) ನಡೆದ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಕರ್ನಾಟಕದ ಉಚ್ಚ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳ ಮುಂದೆ ಜುಲೈ-2025 ರ ಮಾಹೆಯಲ್ಲಿ 13,86,837 ಪ್ರಕರಣಗಳು ಇದ್ದವು. ಆ ಪ್ರಕರಣಗಳಲ್ಲಿ 76,230 ಪ್ರಕರಣಗಳನ್ನು ಗುರುತಿಸಿ ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳುಹಿಸಲಾಯಿತು, ಅದರಲ್ಲಿ 47,080 ಪ್ರಕರಣಗಳನ್ನು ಮಧ್ಯಸ್ಥಿಕೆಗೆ ತೆಗದುಕೊಂಡಿದ್ದು, 5,575 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ತಿಳಿಸಿದರು.

90 ದಿನಗಳ ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನ ಮಧ್ಯಸ್ಥಿಕೆಯಲ್ಲಿ 3038 (2862+176) ವೈವಾಹಿಕ ಮತ್ತು ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, 649 ಪಾಲು ವಿಭಾಗ, 104 ಅಪಘಾತ ಪರಿಹಾರ, 668 ಚೆಕ್ ಬೌನ್ಸ್, 21 ವಾಣಿಜ್ಯ ವಿವಾದ, 188 ಕ್ರಿಮಿನಲ್ ಕಾಂಪೌಂಡಬಲ್, 40 ಡಿ.ಆರಿ. ಮತ್ತು 8 ಗ್ರಾಹಕ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ವಿವರಣೆ ನೀಡಿದರು.

Home add -Advt

ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನದ ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ ಬಾಕಿ ಉಳಿದ 1,26,194 ಪ್ರಕರಣಗಳ ಪೈಕಿ 4655 ಪ್ರಕರಣಗಳನ್ನು ಮಧ್ಯಸ್ಥಿಕೆಗೆ ಗುರುತಿಸಿ, ಈ ಪೈಕಿ 995 ಪ್ರಕರಣಗಳನ್ನು ತೆಗದುಕೊಂಡು ಅವುಗಳಲ್ಲಿ 156 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.

ದೇಶದಾದ್ಯಂತ ನಾಲ್ಕನೇ ರಾಷ್ಟ್ರೀಯ ಮೇಗಾ ಲೋಕ್ ಅದಾಲತ್ ಡಿಸೆಂಬರ್.13 ರಂದು ನಡೆಯಲಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಲೋಕ ಅದಾಲತ್ ನಲ್ಲಿ ಸುಮಾರು ವರ್ಷಗಳಿಂದ ಬಾಕಿ ಇರುವ ಪ್ರಕಣಗಳ ಇತ್ಯರ್ಥಕ್ಕೆ ಅವಕಾಶ ಕಲ್ಪಿಸಲಾಗುವುದು. ಇದರಿಂದ ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ಕಕ್ಷಿದಾರರ ಹಣ, ಸಮಯ ಉಳಿತಾಯದ ಜೊತೆಗೆ ತ್ವರಿತ ಗತಿಯಲ್ಲಿ ಪರಿಹಾರ ಕಲ್ಪಿಸಲು ಸಹಾಯವಾಗಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಮಾಹಿತಿ ನೀಡಿದರು.

Related Articles

Back to top button