
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಜೆ.ಪಿ.ಪಾರ್ಕ್ ಬಳಿ ಡಿಸಿಎಂ ಡಿ.ಕೆ.ಶಿವಕುಮಾರ್ ನಡಿಗೆ ಕಾರ್ಯಕ್ರಮದಲ್ಲಿ ವೇದಿಕೆಗೆ ಬಂದು ಗಲಾಟೆ ಮಾಡಿದ್ದ ಬಿಜೆಪಿ ಶಾಸಕ ಮುನಿರತ್ನ, ಸಚಿವರು ತನ್ನ ಮೇಲೆ ರೌಡಿಗಳನ್ನು ಬಿಟ್ಟು ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಜೆ.ಪಿ.ಪಾರ್ಕ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ನಾನೊಬ್ಬ ಸ್ಥಳೀಯ ಶಾಸಕನಾಗಿದ್ದರೂ ನನ್ನನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಸರ್ಕಾರದ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ. ಈಗ ನನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನನ್ನನ್ನು ಎ ಕರಿಟೋಪಿ ಎಂಎಲ್ ಎ ಎಂದು ಕರೆದು ಅವಮಾನಿಸಿದ್ದಾರೆ. ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಭಾಗವಹಿಸಿ ಬಳಿಕ ಅಲ್ಲಿಗೆ ಹೋಗಿದ್ದ ನನ್ನನ್ನು ಅಗೌರವಯುತವಾಗಿ ಎ ಕರಿ ಟೋಪಿ ಎಂಎಲ್ ಎ ಎಂದು ಕರೆದು ಅವಮಾನಿಸಿದ್ದಾರೆ. ಡಿ.ಕೆ.ಶಿವಕುಮಾರ್ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತೇನೆ ಎಂದಿರುವ ಮುನಿರತ್ನ, ಸ್ಥಳದಲ್ಲಿಯೇ ಧರಣಿ ಕುಳಿತಿದ್ದಾರೆ. ಕೈಯಲ್ಲಿ ಗಾಂಧೀಜಿ ಭಾವಚಿತ್ರ ಹಿಡಿದು ಏಕಾಂಗಿಯಾಗಿ ಮುನಿರತ್ನ ಧರಣಿ ನಡೆಸಿರುವ ಘಟನೆ ನಡೆದಿದೆ.