*BREAKING: ಕಬ್ಬು ಬೆಳೆಗಾರರ ಪ್ರತಿಭಟನೆಗೆ ಮಣಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಕಳೆದ ಒಂಭತ್ತು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಪ್ರತಿ ಟನ್ ಕಬ್ಬಿಗೆ ಬೆಲೆ ನಿಗದಿ ಮಾಡಲು ಸರ್ಕಾರ ನಿರ್ಧರಿಸಿದೆ.
ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿಗೆ ಒತ್ತಾಯಿಸಿ ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಬೆಳಗಾವಿಯ ಹತ್ತರಗಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಮುಖಂಡರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ದರ ನಿಗದಿ ಮಾಡಲು ನಿರ್ಧರಿಸಲಾಗಿದೆ.
ಸಭೆ ಬಳಿಕ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಸರ್ಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ಒಟ್ಟು 3300 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.



