
ಪ್ರಗತಿವಾಹಿನಿ ಸುದ್ದಿ : ಭೀಕರ ಅಗ್ನಿ ಅವಘಡ ಸಂಭವಿಸಿ ಸುಮಾರು 400-500 ಗುಡಿಸಲುಗಳು ಸಂಪೂರ್ಣವಾಗಿ ಭಸ್ಮವಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೆಹಲಿಯ ರೋಹಿಣಿ ಪ್ರದೇಶದ ರಿಥಾಲಾ ಮೆಟ್ರೋ ನಿಲ್ದಾಣದ ಸಮೀಪ ಸಂಭವಿಸಿದೆ.
ರಿಥಾಲಾ ಮೆಟ್ರೋ ನಿಲ್ದಾಣದ ಬಳಿಯ ಗುಡಿಸಲು ಪ್ರದೇಶದಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದೆ. ಸುಮಾರು 400 ರಿಂದ 500 ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಸ್ಥಳದಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯದ ದೊಡ್ಡ ರಾಶಿಗಳು ಬೆಂಕಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದು, ಗಾಯಗೊಂಡವರನ್ನು ತಕ್ಷಣವೇ ಸಮ್ಹರ್ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ವರದಿಗಳ ಪ್ರಕಾರ, ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡಿರುವುದೇ ಬೆಂಕಿ ಹೊತ್ತಿಕೊಳ್ಳಲು ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ತನಿಖೆ ಮುಂದುವರೆದಿದೆ.



