
ಪ್ರಗತಿವಾಹಿನಿ ಸುದ್ದಿ: ತಡರಾತ್ರಿ ಎರಡು ಐಶಾರಾಮಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಬಳಿ ಶನಿವಾರ ತಡರಾತ್ರಿ ನಡೆದಿದೆ. ಈ ಅಪಘಾತದ ತೀವ್ರತೆಗೆ ದಾವಣಗೆರೆ ನೋಂದಣಿ ಹೊಂದಿದ್ದ ಕಿಯಾ ಕಾರಿನಲ್ಲಿದ್ದ ಕುಮಾರಪ್ಪ ಹಾಗೂ ಸತೀಶ್ ದುರ್ಮರಣಕ್ಕೀಡಾಗಿದ್ದಾರೆ.
ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸುವ ಸಂದರ್ಭದಲ್ಲಿ, ಅದೇ ಮಾರ್ಗದಲ್ಲಿ ಬರುತ್ತಿದ್ದ ಬೈಕ್ ಸವಾರನಿಗೂ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ಆತನನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.




