*ಒತ್ತಡ ಕಡಿಮೆ ಮಾಡಲು ಕ್ರೀಡಾಕೂಟ ಅವಶ್ಯಕ: ಕ್ರೀಡಾಕೂಟ ಉದ್ಘಾಟಿಸಿದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಹೇಳಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕ್ರೀಡಾಕೂಟ ಉತ್ಸವವನ್ನು ಪ್ರಾದೇಶಿಕ ಆಯುಕ್ತ ಜಾನಕಿ ಕೆ.ಎಂ. ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು, ಇಂತಹ ಕ್ರೀಡಾಕೂಟದಿಂದ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒತ್ತಡ ಕಡಿಮೆ ಆಗುತ್ತದೆ. ಅವರಿಗೆ ಮತ್ತಷ್ಟು ಕೆಲಸ ಮಾಡಲು ಮಾನಸಿಕವಾಗಿ ಸದೃಢವಾಗುತ್ತಾರೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೂ ದೊಡ್ಡದ್ದಾಗಿದೆ. ಈ ಇಲಾಖೆಯಲ್ಲಿ ಕೆಲಸದ ಒತ್ತಡ ಹೆಚ್ಚಿದೆ. ಆದ್ದರಿಂದ ಇಲಾಖೆ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರೀಡಾಕೂಟವೂ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಕಳೆದ ಬಾರಿಯೂ ಕ್ರೀಡಾಕೂಟ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಇದರಿಂದ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೆಲಸದ ಒತ್ತಡ ಕಡಿಮೆ ಆಗಿರುವುದರಿಂದ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಿದೆ. ಜಿಲ್ಲೆಯೂ ತೆರಿಗೆ ವಸೂಲಾತಿಯಲ್ಲಿ ಸಾಕಷ್ಟು ಪ್ರಗತಿ ಮಾಡಿದ್ದು, ಅದೇ ರೀತಿ ಅನೇಕ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮವಹಿಸಿದ್ದಾರೆ. ಆಡಳಿತ ಮೇಲೆ ಸಕಾರಾತ್ಮಕ ಪರಿಣಾಮ ಬೀರಿರುವುದನ್ನು ಕಾಣುತ್ತೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಉಪ ಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ, ಬಸವರಾಜ ಅಡವಿಮಠ, ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ, ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಎಇಇಗಳು, ಸಹಾಯಕ ನಿರ್ದೇಶಕರು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.



