2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ಅಪಪ್ರಚಾರ
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.
ನುಡಿದಂತೆ ನಡೆಸಿದ್ದೇವೆ
ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದರು.
ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿ.ಕೆ.ಶಿವಕುಮಾರ್ ಬದ್ಧರಾಗಬೇಕು
ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ. ಕೆ.ಶಿವಕುಮಾರ್ ಒಪ್ಪಬೇಕು ಎಂದರು.
ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆಯುವೆವು
ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ. ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದರು.




