ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಸಿಎಲ್ ಪಿ ನಾಯಕ, ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆಯಲಿದೆ.
ಪರಮೇಶ್ವರ್ ಅವರ ಬೆಂಗಳೂರು ನಿವಾಸದಲ್ಲಿ ಸಂಜೆ 4 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪರಾಮರ್ಶೆ, ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕೆಂಬ ಚರ್ಚೆ ಹಾಗೂ ಸಿಎಲ್ ಪಿ, ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡುರಾವ್, ಡಿ.ಕೆ ಶಿವಕುಮಾರ್ ಸೇರಿದಂತೆ ಒಟ್ಟು 21 ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸಿಎಲ್ ಪಿ ನಾಯಕನ ಸ್ಥಾನ ಆಯ್ಕೆ ಕುರಿತು ಮೊದಲು ರಾಜ್ಯ ನಾಯಕರು ಒಟ್ಟಾಗಿ ಕುಳಿತು ಚರ್ಚಿಸಿ ಒಮ್ಮತದ ನಿರ್ಧಾರ ಕೈಗೊಳ್ಳಿ. ಬಳಿಕ ದೆಹಲಿಗೆ ಬರುವಂತೆ ಡಾ. ಜಿ ಪರಮೇಶ್ವರ್ ಅವರಿಗೆ ಜವಾಬ್ದಾರಿ ವಹಿಸಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ.
ಸಭೆಯಲ್ಲಿ ಕೈಗೊಂಡ ನಿರ್ಧಾರ, ಅಭಿಪ್ರಾಯಗಳ ವರದಿಯನ್ನು ಆ ಬಳಿಕ ರಾಜ್ಯ ನಾಯಕರು ಹೈಕಮಾಂಡ್ ಗೆ ಒಪ್ಪಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ