*ಬೆಳಗಾವಿ ವಿಧಾನ ಮಂಡಳ ಚಳಿಗಾಲ ಅಧಿವೇಶನ-2025: ಪೂರ್ವ ಸಿದ್ಧತೆ ಪರಿಶೀಲನೆ*

ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ ಸಮಿತಿಗಳು ತಮಗೆ ನೀಡಲಾಗಿರುವ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿ ವಸತಿ, ಊಟೋಪಹಾರ, ಸಾರಿಗೆ ಮತ್ತಿತರ ವ್ಯವಸ್ಥೆಗಳನ್ನು ಖಚಿತಪಡಿಸಿಕೊಂಡು ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.
ಸುವರ್ಣ ವಿಧಾನ ಸೌಧದಲ್ಲಿ ಬುಧವಾರ (ಡಿ.3) ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿವೇಶನದ ಕಾರ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೇ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ,ಕಾಲೇಜು ವಿದ್ಯಾರ್ಥಿಗಳಿಗೆ ಮುಖ್ಯ ದ್ವಾರದಿಂದ ಸುವರ್ಣ ವಿಧಾನ ಸೌಧದವರೆಗೆ ಕರೆತರಲು ನಿಯಮಿತವಾಗಿ ಮಿನಿಬಸ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿ, ಸಿಬ್ಬಂದಿಗೆ ಸೂಕ್ತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಅಧಿವೇಶನ ಜರುಗುವ ಸಂದರ್ಭದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸಚಿವರು, ಶಾಸಕರು, ಅಧಿಕಾರಿ, ಸಿಬ್ಬಂದಿಗಳಿಗೆ ಪ್ರತ್ಯೇಕ ಊಟದ ಕೌಂಟರಗಳ ವ್ಯವಸ್ಥೆ ಮಾಡಬೇಕು.
ಅಧಿವೇಶನಕ್ಕೆ ಆಗಮಿಸುವ ಹಿರಿಯ ಅಧಿಕಾರಿಗಳಿಗೆ ಲೈಸನ್ ಅಧಿಕಾರಿಗಳನ್ನು ನೇಮಕ ಮಾಡಿ ಈಗಾಗಲೇ ಆದೇಶ ಹೊರಡಿಸಲಾಗಿದೆ. ಲೈಸನ್ ಅಧಿಕಾರಿಗಳು ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಬೇಕು.
ಕಳೆದ ಬಾರಿಯಂತೆ ಈ ಬಾರಿಯೂ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ತಮ್ಮ ಜವಾಬ್ದಾರಿ ನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ಅಧಿವೇಶನ ವೀಕ್ಷಣೆಗೆ ಆಗಮಿಸುವ ವಿವಿಧ ಜಿಲ್ಲೆಗಳ ಶಾಲಾ ವಿದ್ಯಾರ್ಥಿಗಳ ಕುರಿತು ಮುಂಚಿತವಾಗಿ ಆಯಾ ಶಾಲೆಗಳ ಮಾಹಿತಿ ಪಡೆದುಕೊಳ್ಳಬೇಕು. ಬೇರೆ ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೆಶಕರುಗಳೊಂದಿಗೆ ವೀಡಿಯೋ ಸಂವಾದ ಸಭೆ ಜರುಗಿಸಿ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ವಿದ್ಯಾರ್ಥಿಗಳ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪೊಲಿಸ್ ಆಯಕ್ತರಾದ ಭೋರಸೆ ಗುಲಾಬರಾವ್ ಭೂಷಣ, ವವಿವಿಧ ಬಗೆಯ ಪಾಸ್ ವಿತರಣೆ ಹಾಗೂ ಭದ್ರತಾ ವ್ಯವಸ್ಥೆ ಕುರಿತು ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಪರಿಕ್ಷಾರ್ಥಿ ಐ.ಎ.ಎಸ್.ಅಧಿಕಾರಿ ಅಭಿನವ್ ಜೈನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಹಾಗೂ ವಿವಿಧ ಉಪ ಸಮಿತಿಗಳ ಮುಖ್ಯಸ್ಥರು, ಕರ್ತವ್ಯಕ್ಕೆ ನಿಯೋಜಿತ ಲೈಸನ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.



