Belagavi NewsBelgaum NewsKannada NewsKarnataka News

*ಕಾಮುಕ ಸ್ವಾಮಿಗೆ 35 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮನೆಗೆ ಬಿಡುತ್ತೇನೆ ಎಂದು ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಮಹಾಸ್ವಾಮಿಯೊಬ್ಬನಿಗೆ ಬೆಳಗಾವಿಯ ನ್ಯಾಯಾಲಯ ಘೋರ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 

ಹಠ ಯೋಗಿ ಎಂದು ಹೇಳಿಕೊಂಡಿದ್ದ ಸ್ವಾಮೀಜಿಗೆ ಆರೋಪ ಸಾಬೀತಾಗಿದೆ ಎಂದು ಶುಕ್ರವಾರ ಬೆಳಗಾವಿಯ ನ್ಯಾಯಾಲಯ ತೀರ್ಪು ನೀಡಿದ್ದು ಶಿಕ್ಷೆಯನ್ನು ಶನಿವಾರ ನೀಡಿದೆ. ಆರೋಪಿಗೆ ಬರೋಬ್ಬರಿ 35 ವರ್ಷಗಳ ಕಠಿಣ ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮ ಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಮೇ.13 ರಂದು ಮಠಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ತನ್ನ ಕಾರಿನಲ್ಲಿ ಕರೆದೊಯ್ದಿದ್ದ. ನಂತರ ರಾಯಚೂರು, ಬಾಗಲಕೋಟೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಸುತ್ತಾಡಿಸಿ ಅತ್ಯಾಚಾರ ಎಸಗಿ ಕೊನೆಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದ.

ಈ ಕುರಿತು ಅಪ್ರಾಪ್ತ ಬಾಲಕಿ ಕುಟುಂಬದವರು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ತದನಂತರ ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಿ ಮೇ. 24 ರಂದು ಅತ್ಯಾಚಾರ ಆರೋಪಿ ಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದರು.

Home add -Advt

ಪ್ರಕರಣ ಕುರಿತು ವಿಚಾರಣೆ ನಡೆಸಿದ್ದ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಶೇಷ ಶೀಘ್ರಗತಿ ಫೋಕ್ಸ್ ನ್ಯಾಯಾಲಯ ಒಟ್ಟು 8 ಸಾಕ್ಷಿ, 78 ದಾಖಲೆಗಳ ಆಧಾರದ ಮೇಲೆ ಹಠಯೋಗಿ ಲೋಕೇಶ್ವರ ಮಹಾಸ್ವಾಮಿ ಮೇಲಿನ ಆರೋಪ ಸಾಬೀತಾಗಿವೆ ಎಂದು ತೀರ್ಪು ನೀಡಿದ್ದು ಶನಿವಾರ ಶಿಕ್ಷೆ ಪ್ರಕಟಿಸಿದೆ.

ಆರೋಪಿಗೆ ಒಟ್ಟು 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಆದೇಶ ನೀಡಿದೆ. ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂ. 4 ಲಕ್ಷ ಪರಿಹಾರ ಧನ ಪಡೆಯಲು ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಪ್ರಕರಣದ ವಿಚಾರಣೆ ನಡೆಸಿದ್ದರು. ಅಭಿಯೋಜಕ ಎಲ್. ವಿ. ಪಾಟೀಲ್ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

Related Articles

Back to top button