*ಇನಾಮ್ದಾರ್ ಸಕ್ಕರೆ ಕಾರ್ಖಾನೆ ವಿರುದ್ಧ ಕಿತ್ತೂರು ಕರ್ನಾಟಕ ಸೇನೆ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮ್ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲ ದಿನಗಳ ಹಿಂದೆ ಬಾಯ್ಲರ್ ಸ್ಫೋಟವಾಗಿ ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇಷ್ಟಾದರೂ ಕಾರ್ಖಾನೆಯ ಮಾಲೀಕರು ಮತ್ತು ಆಡಳಿತ ಮಂಡಳಿ ಮೃತಪಟ್ಟ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ್ ಕುಲ್ಕರ್ ನೇತೃತ್ವದಲ್ಲಿ ಕಾರ್ಖಾನೆ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರ ಬಗ್ಗೆ ಮುಂಜಾಗೃತೆ ಕ್ರಮ ಕೈಗೊಳ್ಳದೇ ಇರುವ ಕಾರಣದಿಂದ ಎಂಟು ಜನ ಮೃತಪಟ್ಟಿದ್ದಾರೆ. ಆದ್ದರಿಂದ ಕಾರ್ಮಿಕರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು ಹಾಗೂ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಇನ್ನು ಮುಂದಾದರೂ ಗುಣಮಟ್ಟದ ಸುರಕ್ಷತಾ ಕ್ರಮಗಳನ್ನು ಮತ್ತು ಭದ್ರತೆ ಒದಗಿಸುವ ಸಲುವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕ ಇಲಾಖೆಯ ನಿಯಮಾನುಸಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸಬೇಕು ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳ ಕೈಗೊಂಡು ಕಾರ್ಮಿಕರ ಜೀವ ಕಾಪಾಡಬೇಕು ಎಂದು ಒತ್ತಾಯಿಸಿದರು.
ಇಷ್ಟೆಲ್ಲಾ ಅನಾಹುತಗಳು ನಡೆದರೂ ಕೂಡ ಕಾರ್ಖಾನೆಯ ಮಾಲೀಕರು ಬಂದು ಮೃತ ಕುಟುಂಬದವರಿಗೆ ಸಾಂತ್ವನ ಹೇಳೆದ ಇರುವುದನ್ನು ತೀವ್ರವಾಗಿ ಖಂಡಿಸಿದ ಪ್ರತಿಭಟನೆಕಾರರು ಮೃತ ಕುಟುಂಬದವರಿಗೆ ಮತ್ತು ಕಾರ್ಮಿಕರಿಗೆ ಸರಿಯಾಗಿ ಸ್ಪಂದಿಸದಿದ್ದರೆ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸನಗೌಡ ಸಂಗನಗೌಡರ, ತಾಲೂಕಾಧ್ಯಕ್ಷ ರಾಜು ಬೋಳನ್ನವರ, ದೀಪಕ್ ಸಟೋಜಿ, ಶಿವಾನಂದ ಕುರಬೇಟ, ಮಲ್ಲಿಕಾರ್ಜುನ್ ಬಾಜಿ, ಅಭಿಷೇಕ ಕಲಾಲ, ಸೋಮು ತೋಟಗಿ,ಪಕ್ರು ಕುಸ್ಲಾಪುರ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.




