ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ಸಂವಿಧಾನದ ಹಕ್ಕುಗಳನ್ನು ಹತ್ತಿಕ್ಕುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ನಡೆಸಿ, ಹೆದಾರಿಸುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಯೋತಿ ನಿವಾಸ್ ಕಾಲೇಜು ವಿದ್ಯಾರ್ಥಿಗಳ ಮೇಲೆ ಬಿಜೆಪಿ ನಾಯಕರ ಧಮ್ಕಿ ವಿಚಾರವಾಗಿ ಪ್ರತಿಕ್ರಿಯಿಸಿದರು. ಬಿಜೆಪಿಯವರು ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ದೇಶದಲ್ಲಿ ವಾಕ್ ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ. ಮೊನ್ನೆ ನಡೆದ ಜೆ ಎನ್ ಯು ವಿದ್ಯಾರ್ಥಿಗಳ ಮೇಲೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈ ವರೆಗೆ ಒಬ್ಬರನ್ನೂ ಬಂಧಿಸಿ ಕ್ರಮ ಕೈಗೊಂಡಿಲ್ಲ. ಈ ಘಟನೆಗಳ ಹಿಂದೆ ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದ್ದಾರೆ ಎಂದು ಗುಡುಗಿದರು.
ಜೆ ಎನ್ ಯು ಹಿಂಸಾಚಾರ ಘಟನೆ ಸರ್ಕಾರಿ ಪ್ರಾಯೋಜಿತ. ದೆಹಲಿ ಪೊಲೀಸರು ಅಮಿತ್ ಶಾ ಕೈಕೆಳಗೆ ಕೆಲಸ ಮಾಡುತ್ತಿದ್ದಾರೆ. ಘಟನೆ ನಡೆದು 72 ಗಂಟೆಗಳಾದರೂ ಪೊಲೀಸರು ಏನು ಮಾಡುತ್ತಿದ್ದಾರೆ? ದೇಶದಲ್ಲಿ ಸರ್ವಾಧಿಕಾರ ನಡೆಯುತ್ತಿದೆ ಎಂದರು.
ಇನ್ನು ಸಿಎಎ ವಿರುದ್ಧ ನಾವು ಪ್ರತಿಭಟನೆ ನಡೆಸಿಲ್ಲ. ಬಿಜೆಪಿಯವರು ಸಂವಿಧಾನಕ್ಕೆ ವಿರೋಧವಾದ ಸಿಎಎ ಕಾನೂನು ಮಾಡಿದ್ದಾರೆ. ಬಿಜೆಪಿಯವರ ಸುಳ್ಳುಗಳನ್ನು ಜನರಿಗೆ ನಾವು ಅರ್ಥಮಾಡಿಸುತ್ತಿದ್ದೇವೆ. ಅನಗತ್ಯವಾಗಿ ನಮ್ಮ ಹಾಗೂ ಎಡಪಕ್ಷಗಳ ವಿರುದ್ಧ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ