*ಜನಾರ್ಧನ ರೆಡ್ಡಿ ಮನೆ ಮುಂದೆ ಕಾಂಗ್ರೆಸ್ ದಿಢೀರ್ ಪ್ರತಿಭಟನೆ: ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ, ಮನೆಗೆ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.
ಜನಾರ್ಧನ ರೆಡ್ಡಿ ಅವರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿ ಬ್ಯಾನರ್ ಕಟ್ತುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣ ಖಂಡಿಸಿ ಬಿಜೆಪಿ ನಾಯಕರು ನಿನ್ನೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನಾರ್ಧನರೆಡ್ಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.
ಕಾಂಗ್ರೆಸ್ ಸರ್ಕಾರಕ್ಕೆ ಶಾಸಕನೊಬ್ಬನಿಗೆ ರಕ್ಷಣೆ ನೀಡಲು ಆಗುತ್ತಿಲ್ಲ. ಕಾಂಗ್ರೆಸ್ ಶಾಸಕರೇ ನನ್ನನ್ನು ಟಾರ್ಗೆಟ್ ಮಾಡಿ ಗುಂಡಿನ ದಾಳಿ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ನನಗೆ ರಕ್ಷಣೆ ಕೊಡಲಾಗದ ನೀವು ಎಂತಹ ಡಿಸಿಎಂ? ಡಿಸಿಎಂ ಆಗಿ ಏನು ಕಿಸಿದಿದ್ದೀಯಾ? ಎಂದು ನಾಲಿಗೆ ಹರಿಬಿಟ್ಟಿದ್ದರು. ಜನಾರ್ಧನ ರೆಡ್ಡಿ ಹೇಳಿಕೆಗೆ ಕೆರಳಿ ಕೆಂಡವಾಗಿರುವ ಕಾಂಗ್ರೆಸ್ ನಾಯಕರು, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್ ನೇತೃತ್ವದಲ್ಲಿ ಇಂದು ಜನಾರ್ಧನ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ತಕ್ಷಣ ಎಚ್ಚೆತ್ತ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.




