*ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಮತ್ತು ಪಿಎಸ್ಐ ನೇಮಕಾತಿ ಹಗರಣ: 21 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಿದ ED*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಮತ್ತು ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಒಟ್ಟು 21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದೆ.
ಬೆಂಗಳೂರಿನ ಬಿಎಂಎಸ್ ಎಜುಕೇಶನ್ ಟ್ರಸ್ಟ್ಗೆ ಸಂಬಂಧಿಸಿದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, 19.46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಇದೇ ವೇಳೆ 2021–22ರಲ್ಲಿ ನಡೆದ 545 ಪಿಎಸ್ಐಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 1.53 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
ಎಂಜಿನಿಯರಿಂಗ್ ಪ್ರವೇಶ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೂರು ನೀಡಿತ್ತು. ಮಲ್ಲೇಶ್ವರಂ ಹಾಗೂ ಹನುಮಂತನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಪ್ರತ್ಯೇಕ ಕೇಸ್ ದಾಖಲಿಸಿಕೊಂಡ ಇಡಿ ತನಿಖೆ ಆರಂಭಿಸಿತ್ತು. 2025ರಲ್ಲಿ ಬಿಎಂಎಸ್ ಟ್ರಸ್ಟ್ ಸದಸ್ಯರು, ಎಂಜಿನಿಯರಿಂಗ್ ಕಾಲೇಜುಗಳು, ಮಧ್ಯವರ್ತಿಗಳು ಹಾಗೂ ಏಜೆಂಟರ ಮನೆಗಳು ಸೇರಿ 18 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿತ್ತು.




