*ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ 14 ಜನರಿಗೆ ಅವಕಾಶ: ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗದ ಪೂಜೆಗೆ ಅವಕಾಶ ನೀಡಿದ್ದ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ಕೂಡ ಗ್ರೀನ್ ಸಿಗ್ನಲ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಿವರಾತ್ರಿ ನಿಟ್ಟಿನಲ್ಲಿ ಪೂಜೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ದರ್ಗಾದಲ್ಲಿರುವ ಶಿವಲಿಂಗಕ್ಕೆ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಲು ಹೈಕೋರ್ಟ್ 14 ಜನರಿಗೆ ಅವಕಾಶ ನೀಡಿದೆ. ಆಂದೋಲದ ಸಿದ್ದಲಿಂಗ ಸ್ವಾಮೀಜಿ, ಹರ್ಷಾನಂದ ಗುತ್ತೇದಾರ್, ಗುರುಶಾಂತ ಟೆಂಗಳಿ ಸೇರಿದಂತೆ 14 ಜನರಿಗೆ ಪೂಜೆಗೆ ಅವಕಾಶ ನೀಡಲಾಗಿದೆ. ಇಂದು ಮಧ್ಯಾಹ್ನ 2ಗಂಟೆಯಿಂದ ರಾತ್ರಿ 8ಗಂಟೆಯವರೆಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಈಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆಳಂದ ಸಂಪರ್ಕಿಸುವ ಎಲ್ಲಾ ಮಾರ್ಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ದರ್ಗಾದ ಒಳಗೆ, ದರ್ಗಾ ಸುತ್ತಮುತ್ತ 40ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, 4 ಅತ್ಯಾಧುನಿಕ ಡ್ರೋನ್ ಕ್ಯಾಮರಾಗಳ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ. ನಗರದಾದ್ಯಂತ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.



