
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಸ್ನೇಹಮಯಿ ಕೃಷ್ಣರನ್ನು ವಶಕ್ಕೆ ಪಡೆದಿದ್ದು, ಶಾಂತಿನಗರದ ಸಿಸಿಬಿ ಕಚೇರಿಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಗಿದೆ. ಸಿಸಿಬಿಯಿಂದ ಸ್ನೇಹಮಯಿ ಕೃಷ್ಣ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಮುಂಬಡ್ತಿ ಪಡೆಯಲು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಕೋಟ್ಯಂತರ ರೂಪಾಯಿ ಲಂಚ ನೀಡಿದ್ದಾರೆ. ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾಗಿ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು.
ಸ್ನೇಹಮಯಿ ಕೃಷ್ಣ ತನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕಾನೂನು ಕ್ರಮ ಕೈಗೊಳ್ಳುವಂತೆ ನಟೇಶ್, ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸಿಸಿಬಿ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.



