*ರಾಜಧಾನಿ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾನದಂಡ: ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ*

AQI 100 ಮೀರಿದರೆ ನೋಟಿಸ್
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಂತೆಯೇ ಬೆಂಗಳೂರು ಕೂಡ “ಗ್ಯಾಸ್ ಚೇಂಬರ್” ಆಗದಂತೆ ತಡೆಗಟ್ಟಲು ನಗರದ ಎಲ್ಲ 28 ಶಾಸಕರೊಂದಿಗೆ ಶೀಘ್ರ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಮನವಿಯ ಮೇರೆಗೆ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ನಗರದಲ್ಲಿ ವಾಯು, ಜಲ ಮತ್ತು ಶಬ್ದ ಮಾಲಿನ್ಯ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು. ಸಮಸ್ಯೆ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳ ಸಹಕಾರ ಅಗತ್ಯವೆಂದು ಒತ್ತಿ ಹೇಳಿದರು.
ರಸ್ತೆ ಧೂಳು ಕಾರಣವಾಗಿ ವಾಯು ಗುಣಮಟ್ಟ ಕುಸಿಯುತ್ತಿದ್ದು ಮಕ್ಕಳಲ್ಲಿ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಸುರೇಶ್ ಕುಮಾರ್ ಗಮನಸೆಳೆದರು. ತುರ್ತು ಕ್ರಮ ಅಗತ್ಯವಿದೆ ಎಂದು ಅವರು ತಿಳಿಸಿದರು.
AQI 100 ಮೀರಿದರೆ ನೋಟಿಸ್
ನಗರದ 11 ಸ್ಥಿರ ಹಾಗೂ 13 ಸಂಚಾರಿ ಘಟಕಗಳ ಮೂಲಕ ವಾಯು ಗುಣಮಟ್ಟ ಮಾಪನ ನಡೆಯುತ್ತಿದೆ. ಸೂಚ್ಯಂಕ 100 ಮೀರಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಿ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು; ಪಾಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ
ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಎಲ್ಲ ಜನಪ್ರತಿನಿಧಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ಶೀಘ್ರ ನಡೆಯಲಿದೆ ಎಂದು ಹೇಳಿದರು.
ಒಮ್ಮೆ “ಉದ್ಯಾನ ನಗರಿ” ಎಂದು ಪ್ರಸಿದ್ಧವಾಗಿದ್ದ ಬೆಂಗಳೂರಿನಲ್ಲಿ ಇಂದಿಗೆ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಕ್ಕೆ ಹವಾಮಾನ ಬದಲಾವಣೆ ಹಾಗೂ ಹಸಿರು ಹೊದಿಕೆ ಕಡಿಮೆಯಾಗಿರುವುದು ಕಾರಣ ಎಂದರು. ಹಸಿರು ವಿಸ್ತರಣೆ ಮೂಲಕ ವಾಯು ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ದಳ
ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ದಳ ರಚಿಸಲು ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿನ ತ್ಯಾಜ್ಯ ಶುದ್ಧೀಕರಣ ಘಟಕಗಳ ಸಂಖ್ಯೆ, ಸಾಮರ್ಥ್ಯ, ಕಾರ್ಯನಿರ್ವಹಣೆ ಹಾಗೂ ಸಂಸ್ಕರಿಸದೆ ಜಲಮೂಲಗಳಿಗೆ ಸೇರುತ್ತಿರುವ ಮಲಿನ ನೀರಿನ ವಿವರಗಳನ್ನು ಪರಿಶೀಲಿಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸಲು ಪರಿಸರ ಇಲಾಖೆಗೆ ಸೂಚಿಸಲಾಗಿದೆ.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



