*ಯುವ ಸಮೃದ್ಧಿ ಸಮ್ಮೇಳನ – ಉದ್ಯೋಗ ಮೇಳದ ಸದುಪಯೋಗಪಡಿಸಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಜಿಲ್ಲೆಯ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಜೊತೆಗೆ ಅವರನ್ನು ಕೌಶಲ್ಯದಲ್ಲಿ ಸಬಲೀಕರಿಸುವ ಉದ್ದೇಶದಿಂದ ಮಾರ್ಚ್ 7 ರಂದು “ಯುವ ಸಮೃದ್ಧಿ ಸಮ್ಮೇಳನ” ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಡಿಡಿಯು-ಜಿಕೇವೈ (DDU-GKY) ಯೋಜನೆಯಡಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯ ಮಿಷನ್ ಬೆಳಗಾವಿ ಸಹಯೋಗದಲ್ಲಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲ, ಯುವಕರನ್ನು ಕೌಶಲ್ಯಪೂರ್ಣವಾಗಿ ತರಬೇತುಗೊಳಿಸಿ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.
ಮಾರ್ಚ್ 7 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಳಗಾವಿಯ ಎಸ್.ಜಿ. ಬಾಳೇಕುಂದ್ರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆವರಣದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲೆಯ ಎಲ್ಲಾ ಉದ್ಯೋಗಾಕಾಂಕ್ಷಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ.
ಈ ಕಾರ್ಯಕ್ರಮದ ಮೂಲಕ ವಿವಿಧ ಕಂಪನಿಗಳು ಮತ್ತು ಸಂಸ್ಥೆಗಳು ಯುವಕರಿಗೆ ಉದ್ಯೋಗದ ಅವಕಾಶಗಳನ್ನು ಒದಗಿಸಲಿದ್ದು, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಮಾರ್ಗದರ್ಶನವೂ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಯುವಕರು ತಮ್ಮ ಭವಿಷ್ಯವನ್ನು ಗಟ್ಟಿಗೊಳಿಸುವ ದಿಕ್ಕಿನಲ್ಲಿ ಇಂತಹ ಅವಕಾಶಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.




